ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿ ಕೆಲವು ಕೋಮುಗಲಭೆ ಪ್ರಕರಣ ಸೇರಿದಂತೆ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹಾಗೂ ಸಾಮಾಜಿಕ ಹೋರಾಟಗಾರರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ.
2026ರ ಮೇ 27ರಂದು ರಾಜ್ಯ ಗೃಹ ಇಲಾಖೆಯು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರಿಗೆ ಆದೇಶಿಸಿದ್ದನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರ ವಿಭಾಗೀಯ ಪೀಠ ನಡೆಸಿತು.
ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ವೆಂಕಟೇಶ್ ದಳವಾಯಿ ಅವರು ಮೂವರು ಹಿರಿಯ ಸಚಿವರ ಶಿಫಾರಸ್ಸಿನ ಅನ್ವಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪ್ರಾಸಿಕ್ಯೂಷನ್ ಹಿಂಪಡೆದಿದೆ. ಈ ಸಂಬಂಧ ೨೦೨೫ರಲ್ಲಿ ಇದೇ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ವಿರುದ್ಧವಾದ ನಿಲುವನ್ನು ಸರ್ಕಾರ ತಳೆದಿದೆ. ಇದಕ್ಕೆ ತಡೆ ನೀಡಬೇಕು” ಎಂದು ಕೋರಿದರು.
ಹೆಚ್ಚುವರಿ ಅಡ್ವೊಕೇಟ್ ಜನರಲ್ ತಾರಾನಾಥ್ ಪೂಜಾರಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಇದನ್ನು ಆಲಿಸಿದ ಪೀಠವು ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸಮಯ ನೀಡಲಾಗುವುದು. ಗೃಹ ಇಲಾಖೆ ಮತ್ತು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ವಿಚಾರಣೆವರೆಗೆ ಪ್ರಕರಣಗಳನ್ನು ಹಿಂಪಡೆದಿರುವ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಆದೇಶಿಸಿತು.
ಈ ಮಧ್ಯೆ, ಪ್ರಕರಣದಲ್ಲಿ ಮೂರನೇ ಪ್ರತಿವಾದಿಯಾಗಿರುವ ಹಾಲಿ ಆರೋಗ್ಯ ಸಚಿವ ಯು ಟಿ ಖಾದರ್‌ಗೆ ನೋಟಿಸ್ ಜಾರಿಗೊಳಿಸಲು ನಿರಾಕರಿಸಿದ ನ್ಯಾಯಾಲಯವು ಸದನದಲ್ಲಿ ಸದಸ್ಯರು ನೀಡುವ ಹೇಳಿಕೆಗೆ ವಿನಾಯಿತಿ ಇರುತ್ತದೆ. ಇದನ್ನು ಆಧರಿಸಿ ಅವರನ್ನು ಪ್ರತಿವಾದಿ ಮಾಡಲಾಗದು ಎಂದು ಮೌಖಿಕವಾಗಿ ಹೇಳಿತು.
ಇದನ್ನು ಸಮರ್ಥಿಸಲು ವಕೀಲ ವೆಂಕಟೇಶ್ ದಳವಾಯಿ ಪ್ರಯತ್ನಿಸಿದರೂ ಅದನ್ನು ಒಪ್ಪದ ಪೀಠವು ಯು ಟಿ ಖಾದರ್‌ಗೆ ನೋಟಿಸ್ ಜಾರಿ ಮಾಡಲು ನಿರಾಕರಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ವಿಚಾರಣೆ ಮುಂದೂಡಿತು.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ ಕೆಲವು ಕೋಮುಗಲಭೆ ಪ್ರಕರಣಗಳು ಸೇರಿದಂತೆ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹಾಗೂ ಸಾಮಾಜಿಕ ಹೋರಾಟಗಾರರ ವಿರುದ್ಧದ 52 ಪ್ರಕರಣಗಳನ್ನು 2026 ಮೇ 27ರ ರಾಜ್ಯ ಸರ್ಕಾರ ಹಿಂಪಡೆದಿತ್ತು