Kannada and Karnataka High Court
Kannada and Karnataka High Court 
ಸುದ್ದಿಗಳು

ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್‌

Siddesh M S

ಪದವಿ ಹಂತದಲ್ಲಿ ಕನ್ನಡ ಭಾಷಾ ಅಧ್ಯಯನವನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆಯಾಜ್ಞೆ ನೀಡುವ ಮೂಲಕ ಮಹತ್ವದ ಆದೇಶ ಮಾಡಿದೆ. ಇದರಿಂದ ಕನ್ನಡ ಕಡ್ಡಾಯವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವಾ ಟ್ರಸ್ಟ್‌, ವ್ಯೋಮಾ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆಯನ್ನು ಅಧ್ಯಯನ ಮುಂದುವರಿಸಲು ಸ್ವತಂತ್ರರು ಎಂದು ಆದೇಶ ಮಾಡಬೇಕು ಎಂದು ಕೋರಿ ಶಿವಕುಮಾರ್‌ ಕೆ ಜಿ ಸೇರಿದಂತೆ ಆರು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

“2021ರ ಡಿಸೆಂಬರ್‌ 16ರಂದು ಮುಂದಿನ ವಿಚಾರಣೆಯವರೆಗೆ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಾಯಪೂರ್ವಕ ಕ್ರಮ ಅನುಸರಿಸದಂತೆ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಆದೇಶಿಸಿದ್ದ ಪೀಠವು, ಕೇಂದ್ರ ಸರ್ಕಾರಕ್ಕೆ ತನ್ನ ನಿಲುವು ಸ್ಪಷ್ಡಪಡಿಸುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜನವರಿ 22ರಂದು ಅಫಿಡವಿಟ್‌ ಸಲ್ಲಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವಾಗ ಪ್ರಾದೇಶಿಕ ಭಾಷೆಯನ್ನು ಕಡ್ಡಾಯಗೊಳಿಸಲಾಗದು ಎಂದು ಹೇಳಿದೆ. ಹೀಗಾಗಿ, ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ಆದ್ದರಿಂದ, ಪದವಿ ವಿದ್ಯಾರ್ಥಿಗಳು ಇತರೆ ವಿಷಯಗಳ ಜೊತೆ ಎರಡು ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಇದರಲ್ಲಿ ಒಂದು ಕನ್ನಡ ಅಧ್ಯಯನ ಕಡ್ಡಾಯವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆಯು 2021ರ ಆಗಸ್ಟ್‌ 7ರಂದು ಹೊರಡಿಸಿರುವ ಆದೇಶ ಮತ್ತು ಅದನ್ನು ವಿಸ್ತರಿಸಿ ಸೆಪ್ಟೆಂಬರ್‌ 15ರಂದು ರಾಜ್ಯ ಸರ್ಕಾರ ಮಾಡಿರುವ ಆದೇಶಗಳಿಗೆ ಮುಂದಿನ ಆದೇಶದವರೆಗೆ ತಡೆ ನೀಡಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ಒತ್ತಾಯಪೂರ್ವಕವಾಗಿ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯಗಳಿಗೆ ನ್ಯಾಯಾಲಯವು 2021ರ ಡಿಸೆಂಬರ್‌ 16 ಆದೇಶದಲ್ಲಿ ನಿರ್ದೇಶಿಸಿದ್ದು, ಕೆಲವು ವಿಚಾರಗಳನ್ನು ಉಲ್ಲೇಖಿಸಿದೆ. ಹೀಗಾಗಿ, ಅದೇ ನಿರ್ದೇಶನವನ್ನು ಮುಂದುವರಿಸಬಹುದು. ಆದರೆ, ಇದು ನಿರ್ಣಾಯಕ ಎಂಬ ರೀತಿಯಲ್ಲಿ ಬಿಂಬಿತವಾಗಬಾರದು” ಎಂದು ಕೋರಿದರು.

ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು “ಎನ್‌ಇಪಿ ಅಡಿ ಯಾವುದೇ ಪ್ರಾದೇಶಿಕ ಭಾಷೆಯನ್ನು ಕಡ್ಡಾಯಗೊಳಿಸಬಹುದೇ ಅಥವಾ ಇಲ್ಲವೇ ಎಂಬ ಏಕೈಕ ಕಾನೂನಿನ ಪ್ರಶ್ನೆ ನಮ್ಮ ಮುಂದಿದೆ. ಕನ್ನಡ ಅಭಿವೃದ್ಧಿಯ ವಿಚಾರ ನಮ್ಮ ಮುಂದಿಲ್ಲ” ಎಂದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರಕರಣದಲ್ಲಿ ಮಧ್ಯಪ್ರವೇಶಿಕೆ ಕೋರಿರುವುದಕ್ಕೆ ಸಂಬಂಧಿಸಿದಂತೆ ವಕೀಲ ಶ್ರೀಧರ್‌ ಪ್ರಭು ಅವರಿಗೆ ಆಕ್ಷೇಪಣೆ ಸಲ್ಲಿಸಲು ಪೀಠವು ಮೌಖಿಕವಾಗಿ ಸೂಚಿಸಿತು. ಅಂತಿಮ ವಿಚಾರಣೆಯನ್ನು ಜುಲೈ ಕೊನೆಯ ವಾರಕ್ಕೆ ಮುಂದೂಡಲಾಗಿದೆ.

2021ರ ಡಿಸೆಂಬರ್‌ 16ರಂದು “ಅರ್ಜಿದಾರರ ಪರ ವಕೀಲರ ವಾದವನ್ನು ನಾವು ಪರಿಗಣಿಸಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಆಧರಿಸಿ ಪದವಿ ಶಿಕ್ಷಣದ ಸಂದರ್ಭದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಯನ್ನೂ ಪರಿಗಣಿಸಬೇಕು ಎಂಬ ನಿಲುವನ್ನು ಮೇಲ್ನೋಟ ನಾವು ಹೊಂದಿದ್ದೇವೆ. ಈ ಹಂತದಲ್ಲಿ ರಾಜ್ಯ ಸರ್ಕಾರವು ಭಾಷೆಯನ್ನು ಕಡ್ಡಾಯಗೊಳಿಸಬಾರದು. ತಮ್ಮ ಇಚ್ಛೆಯ ಅನುಸಾರ ಕನ್ನಡವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಅಧ್ಯಯನ ಮುಂದುವರಿಸಬಹುದಾಗಿದೆ. ಕನ್ನಡವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳನ್ನು ಕನ್ನಡ ಅಧ್ಯಯನ ಮಾಡುವಂತೆ ಮುಂದಿನ ಆದೇಶದವರೆಗೆ ಒತ್ತಾಯ ಮಾಡಬಾರದು” ಎಂದು ಪೀಠ ಆದೇಶಿಸಿತ್ತು.

2021ರ ನವೆಂಬರ್‌ 15ರ ವಿಚಾರಣೆಯಂದು ಎಜಿ ನಾವದಗಿ ಅವರು “ಕನ್ನಡವನ್ನು ಕಡ್ಡಾಯಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ನೀತಿಯು ರಾತ್ರೋರಾತ್ರಿ ಹುಟ್ಟಿಕೊಂಡಿದ್ದಲ್ಲ. ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವನ್ನಾಗಿ ಬೋಧಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ಇದನ್ನು ರಾಜ್ಯ ಸರ್ಕಾರವು ಒಪ್ಪಿಕೊಂಡಿದೆ. ಸಾಹಿತಿ ಹಾಗೂ ಹೋರಾಟಗಾರರಾದ ವಿ ಕೃ ಗೋಕಾಕ್‌ ಅವರ ನೇತೃತ್ವದ ಸಮಿತಿಯು ನೀಡಿರುವ ವರದಿಯ ಶಿಫಾರಸ್ಸುಗಳನ್ನು 1982ರಲ್ಲಿ ಅಂದಿನ ಸಚಿವ ಸಂಪುಟ ಒಪ್ಪಿಕೊಂಡಿದೆ” ಎಂದು ರಾಜ್ಯ ಸರ್ಕಾರದ ಕನ್ನಡ ಕಡ್ಡಾಯ ನೀತಿಯನ್ನು ಸಮರ್ಥಿಸಿಕೊಂಡಿದ್ದನ್ನು ಇಲ್ಲಿ ನೆನಯಬಹುದಾಗಿದೆ.