D K Shivakumar, CBI and Karnataka HC
D K Shivakumar, CBI and Karnataka HC 
ಸುದ್ದಿಗಳು

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ನ.22ಕ್ಕೆ ಡಿ ಕೆ ಶಿವಕುಮಾರ್‌ ಮೇಲ್ಮನವಿ ವಿಚಾರಣೆ ನಡೆಸಲಿರುವ ಹೈಕೋರ್ಟ್‌

Bar & Bench

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿರುವ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ನವೆಂಬರ್‌ 22ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಅವರು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸುಪ್ರೀಂ ಕೋರ್ಟ್‌ ಆದೇಶವನ್ನು ಸಲ್ಲಿಸಿ, ಪ್ರಕರಣ ಪಟ್ಟಿ ಮಾಡುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ನವೆಂಬರ್‌ 22ಕ್ಕೆ ಪಟ್ಟಿ ಮಾಡುವಂತೆ ಹೈಕೋರ್ಟ್‌ನ ವಿಭಾಗೀಯ ಪೀಠವು ರಿಜಿಸ್ಟ್ರಿಗೆ ಆದೇಶಿಸಿತು.

ಸರ್ವೋಚ್ಚ ನ್ಯಾಯಾಲಯವು ನವೆಂಬರ್‌ 11ರಂದು ಶಿವಕುಮಾರ್‌ ಅವರ ಪರವಾಗಿ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಈಗಾಗಲೇ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿದೆ. ಹೀಗಾಗಿ, ಮಧ್ಯಂತರ ಆದೇಶ ತೆರವು ಮಾಡುವಂತೆ ಸಿಬಿಐ ಕೋರಿರುವ ಅರ್ಜಿ ಹಾಗೂ ಮೇಲ್ಮನವಿಯನ್ನು ತುರ್ತಾಗಿ ಅಂದರೆ ಎರಡು ವಾರದಲ್ಲಿ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ಕೋರಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್‌ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಲು ಅಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸಿಬಿಐಗೆ ಒಪ್ಪಿಸಿ ಆದೇಶಿಸಿತ್ತು. ಈ ಆದೇಶ ವಜಾ ಮಾಡಲು ನಿರಾಕರಿಸಿದ್ದ ಕರ್ನಾಟಕ ಏಕಸದಸ್ಯ ಪೀಠದ ಆದೇಶಕ್ಕೆ ಮುಂದಿನ ವಿಚಾರಣೆಯವರೆಗೆ ತಡೆ ನೀಡಲಾಗಿದೆ ಎಂದು 2023ರ ಜೂನ್‌ 12ರಂದು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿತ್ತು.

ಪ್ರಕರಣದ ಹಿನ್ನೆಲೆ: ಡಿ ಕೆ ಶಿವಕುಮಾರ್‌ ಅವರು ಗಣಿಗಾರಿಕೆ ಮತ್ತು ರಿಯಲ್‌ ಎಸ್ಟೇಟ್‌ ಉದ್ಯಮ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 2017ರ ಆಗಸ್ಟ್‌ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ 8.59 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಡಿ ಕೆ ಶಿವಕುಮಾರ್‌ ಅವರಿಗೆ ಸೇರಿದ ವಸತಿ ಕಟ್ಟಡವೊಂದರಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಬೆನ್ನಿಗೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಜಾರಿ ನಿರ್ದೇಶನಾಲಯವು ಶಿವಕುಮಾರ್‌ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್‌ 3ರಂದು ಶಿವಕುಮಾರ್‌ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆಪ್ಟೆಂಬರ್‌ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ಪ್ರಕರಣವನ್ನು ಒಪ್ಪಿಸಿ ರಾಜ್ಯ ಸರ್ಕಾರವು ಆದೇಶಿಸಿತ್ತು.