ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಆಯುಕ್ತರಿಗೆ ಹಲವು ಬಾರಿ ನಿರ್ದೇಶನ ನೀಡಿದ್ದರೂ, ಇಂತಹ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬಹುಮಹಡಿ ವಸತಿ ಅಪಾರ್ಟ್‌ಮೆಂಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಸಿವಿಲ್ ವಿವಾದವೊಂದರಲ್ಲಿ ಖಾಸಗಿ ಕಂಪನಿಗೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ನೀಡಿದ್ದ ನೋಟಿಸ್‌ಗೆ ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ಏಕಸದಸ್ಯ ಪೀಠ ತಡೆ ನೀಡಿದೆ.
ಮೆರ್ಸಸ್ ಎಚ್‌ವಿ ವೆಂಚರ್ಸ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಜಂಟಿ ವ್ಯವಸ್ಥಾಪಕ ನಿರ್ದೇಶಕ ಶಿವರಾಮ್ ಕುಮಾರ್ ಮಳಕಾಳ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣವು ಸಂಪೂರ್ಣವಾಗಿ ಸಿವಿಲ್ ಸ್ವರೂಪದ್ದಾಗಿದ್ದು, ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಒಪ್ಪಂದದ ವಿವಾದವನ್ನು ಬಗೆಹರಿಸಿಕೊಳ್ಳಲು ದೂರುದಾರರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಇದರ ಆಧಾರದಲ್ಲಿ ಸಿಸಿಬಿ ಪೊಲೀಸರು ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ವಾದ ಆಲಿಸಿದ ಪೀಠವು ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರ ಹಸ್ತಕ್ಷೇಪದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
“ಪೊಲೀಸರು ಏನೆಲ್ಲಾ ಮಾಡುವುದಿಲ್ಲ? ಗುತ್ತಿಗೆದಾರರ ಕೆಲಸ ಮಾಡುತ್ತಾರೆ, ದುರಸ್ತಿ ಕೆಲಸವನ್ನೂ ಮಾಡುತ್ತಾರೆ. ತಮಗೆ ವಹಿಸಿರುವ ಕೆಲಸಗಳನ್ನು ಬಿಟ್ಟು ಉಳಿದೆಲ್ಲಾ ಕೆಲಸಗಳನ್ನು ಮಾಡುತ್ತಾರೆ. ಸಿವಿಲ್ ಪ್ರಕರಣಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಹಲವು ಆದೇಶಗಳನ್ನು ನೀಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಆಯುಕ್ತರಿಗೆ ಪದೇ ಪದೇ ನಿರ್ದೇಶನ ನೀಡಲಾಗಿದೆ. ಆದರೂ ಸಿವಿಲ್ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವುದನ್ನು ಪೊಲೀಸರು ನಿಲ್ಲಿಸುತ್ತಿಲ್ಲ. ಇಂತಹ ಹಲವು ಪ್ರಕರಣಗಳು ಪ್ರತಿನಿತ್ಯ ಹೈಕೋರ್ಟ್ ಮುಂದೆ ಬರುತ್ತಿವೆ” ಎಂದು ಪೀಠ ಕಟುವಾಗಿ ನುಡಿಯಿತು.
ಬಳಿಕ, ಸಿಸಿಬಿ ಪೊಲೀಸರು ಅರ್ಜಿದಾರರಿಗೆ ನೀಡಿರುವ ನೋಟಿಸ್‌ಗೆ ಮುಂದಿನ ವಿಚಾರಣೆವರೆಗೆ ತಡೆ ವಿಧಿಸಿತು.
ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ವಿವರಿಸಿದಂತೆ, ದೂರುದಾರರಾದ ಮೆರ್ಸಸ್ ಟೆಕ್ನೋಕಾನ್ ಕನ್ಸ್ಟ್ರಕ್ಷನ್ಸ್ ಆ್ಯಂಡ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್, ಬಹುಮಹಡಿ ವಸತಿ ಅಪಾರ್ಟ್‌ಮೆಂಟ್ ನಿರ್ಮಾಣಕ್ಕಾಗಿ ಅರ್ಜಿದಾರ ಕಂಪನಿಗೆ 2021ರ ಮಾರ್ಚ್ 1ರಂದು ಒಪ್ಪಂದದ ಪತ್ರ ನೀಡಿತ್ತು. ಅದರಂತೆ ಅರ್ಜಿದಾರ ಕಂಪನಿ ವಿವಿಧ ನಿರ್ಮಾಣ ಕಾಮಗಾರಿಗಳನ್ನು ನಿರ್ವಹಿಸಿತ್ತು.
ಒಪ್ಪಂದದಂತೆ ನಿರ್ವಹಿಸಿದ ಕಾಮಗಾರಿಗಳಲ್ಲಿ ಯಾವುದೇ ಲೋಪದೋಷಗಳಿಲ್ಲ. ಕಾಮಗಾರಿಯಲ್ಲಿನ ಲೋಪದೋಷಗಳ ಬಗ್ಗೆ ದೂರುದಾರರು ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ, ಒಪ್ಪಂದಕ್ಕೆ ಸಂಬಂಧಿಸಿದ ಸಿವಿಲ್ ಸ್ವರೂಪದ ವಿವಾದವನ್ನು ಬಗೆಹರಿಸಿಕೊಳ್ಳಲು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಸಿಸಿಬಿ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಈ ದೂರಿನ ಆಧಾರದಲ್ಲಿ ಸಿಸಿಬಿ ಪೊಲೀಸರು 2026ರ ಅಕ್ಟೋಬರ್ 1ರಂದು ನೋಟಿಸ್ ಜಾರಿಗೊಳಿಸಿದ್ದರು. ಇದಕ್ಕೆ ಅರ್ಜಿದಾರರು ಉತ್ತರ ನೀಡಿ, ದೂರುದಾರರೊಂದಿಗಿನ ಒಪ್ಪಂದ ಮತ್ತು ಕಾಮಗಾರಿಗಳ ವಿವರಗಳನ್ನು ಸಲ್ಲಿಸಿದ್ದರು. ಆದರೂ ಪೊಲೀಸರು ತಮ್ಮ ವಿರುದ್ಧ ಕ್ರಮ ಕೈಗೊಳ್ಳುವ ಆತಂಕವಿರುವುದರಿಂದ ನೋಟಿಸ್ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು, CCB ವಿಶೇಷ ವಿಚಾರಣಾ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು, ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ದೂರುದಾರ ಕಂಪನಿಯಾದ ಮೆರ್ಸಸ್ ಟೆಕ್ನೋಕಾನ್ ಕನ್ಸ್ಟ್ರಕ್ಷನ್ಸ್ ಆ್ಯಂಡ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿದೆ.