ಕರ್ನಾಟಕ ಲೋಕಸೇವಾ ಆಯೋಗವು 2024ರ ಡಿಸೆಂಬರ್ 29ರಂದು 384 ಹುದ್ದೆಗಳ ಭರ್ತಿಗೆ ನಡೆಸಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧಿಕರಣವು (ಕೆಎಸ್‌ಎಟಿ) ಅನುಮತಿಸಿದೆ.
ಬೆಂಗಳೂರಿನ ಕೃಷ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೆಎಸ್‌ಎಟಿ ನ್ಯಾಯಾಂಗ ಸದಸ್ಯ ಎಸ್ ವೈ ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರ ವಿಭಾಗೀಯ ಪೀಠ ನಡೆಸಿತು.
“ಕಾನೂನಿನ ಪ್ರಕಾರ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಕೆಪಿಎಸ್‌ಸಿಗೆ ನಿರ್ದೇಶಿಸಲಾಗುತ್ತಿದೆ. ಅರ್ಜಿದಾರರಿಗೆ ಯಾವುದೇ ತೊಂದರೆಗಳಿದ್ದರೆ, ಮುಂದಿನ ವಿಚಾರಣೆಯ ದಿನಾಂಕದಂದು ಅದನ್ನು ಸಲ್ಲಿಸಲು ಸ್ವತಂತ್ರರಿದ್ದಾರೆ” ಎಂದು ತಿಳಿಸಿರುವ ಪೀಠವು ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿದೆ.
“ಪೂರ್ವಭಾವಿ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆಯ ಅನುವಾದದಲ್ಲಿ ಮತ್ತೆ ಲೋಪಗಳಾಗಿವೆ. ಇದರಿಂದ ಕನ್ನಡ ಮಾಧ್ಯಮದ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶಿಸಬೇಕು. ಮಧ್ಯಂತರ ಕ್ರಮವಾಗಿ ಫಲಿತಾಂಶ ಪ್ರಕಟಣೆಗೆ ತಡೆ ನೀಡಬೇಕು” ಎಂದು ಅರ್ಜಿದಾರರು ಕೋರಿದ್ದರು.
ಪ್ರಕರಣದ ಹಿನ್ನೆಲೆ: ಕಳೆದ ಆಗಸ್ಟ್ 27ರಂದು ಕೆಪಿಎಸ್‌ಸಿ 384 ಕೆಎಎಸ್ ಹುದ್ದೆಗಳ ನೇಮಕಕ್ಕೆ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಅದರಲ್ಲಿ 2.10 ಲಕ್ಷ ಅರ್ಜಿ ಸಲ್ಲಿಸಿದ್ದವರ ಪೈಕಿ 1.31 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆಂಗ್ಲಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವಲ್ಲಿ ಲೋಪಗಳು ಉಂಟಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಅಭ್ಯರ್ಥಿಗಳು ಆಯೋಗದ ಮೇಲೆ ಒತ್ತಡ ಹಾಕಿದ್ದರು. ಕೊನೆಗೆ ಸರ್ಕಾರವೇ ಆಯೋಗಕ್ಕೆ ಪೂರ್ವಭಾವಿ ಪರೀಕ್ಷೆ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ಬರೆಯಲು ಆದೇಶ ನೀಡಿತ್ತು.
ಅದರಂತೆ ಆಯೋಗ ಡಿಸೆಂಬರ್ 29ಕ್ಕೆ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 553 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಿತ್ತು. 2.10 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 1.05 ಲಕ್ಷ (ಶೇ.47.7) ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಯೋಗ ತಿಳಿಸಿದೆ. ಅ ಪರೀಕ್ಷೆಯಲ್ಲೂಸಹ ಸುಮಾರು 59 ಪ್ರಶ್ನೆಗಳ ಅನುವಾದದಲ್ಲಿ ದೋಷಗಳಾಗಿವೆ. ಹೀಗಾಗಿ, ಪರೀಕ್ಷೆ ರದ್ದುಗೊಳಿಸಬೇಕು ಎಂದು ಅಭ್ಯರ್ಥಿಗಳು ಕೋರಿದ್ದಾರೆ.