ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ಕಾಯ್ದಿರಿಸಿದೆ.
ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ಶ್ರೀ ಶ್ರೀ ರವಿಶಂಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಪೀಠವು ತೀರ್ಪು ಕಾಯ್ದಿರಿಸಿತು. ಇದೇ ವೇಳೆ, ಅರ್ಜಿದಾರರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿ ಜನವರಿ 13ರಂದು ಹೊರಡಿಸಿರುವ ಮಧ್ಯಂತರ ಆದೇಶವು ಅರ್ಜಿ ಇತ್ಯರ್ಥವಾಗುವವರೆಗೆ ಮುಂದುವರಿಯಲಿದೆ ಎಂದು ಪೀಠ ಮೌಖಿಕವಾಗಿ ತಿಳಿಸಿತು.
ಇದಕ್ಕೂ ಮುನ್ನ ಅರ್ಜಿದಾರರ ಪರ ಹಿರಿಯ ವಕೀಲ ಎಸ್ ಶ್ರೀರಂಗ ಮತ್ತು ವಕೀಲ ಪಿ ಪ್ರಸನ್ನ ಕುಮಾರ್ ವಾದಿಸಿ, ಒತ್ತುವರಿಗೆ ಸಂಬಂಧಿಸಿದ ವರದಿಯಲ್ಲಿ ಎಲ್ಲಿಯೂ ಸಹ ಅರ್ಜಿದಾರರು ಯಾವುದೇ ಆಸ್ತಿಯನ್ನು ಹೊಂದಿರುವುದು ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರಿವುದನ್ನು ತೋರಿಸುವುದಿಲ್ಲ. ಜೊತೆಗೆ, ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ಅರ್ಜಿದಾರರ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ಸರ್ಕಾರದ ಪರ ವಾದಿಸಿದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎ ಬೆಳ್ಳಿಯಪ್ಪ ಅವರು ಅರ್ಜಿದಾರರ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಗಳಿದ್ದು, ಈ ಹಂತದಲ್ಲಿ ತನಿಖೆಯನ್ನು ತಡೆಯಬಾರದು. ತನಿಖೆ ಮುಂದುವರಿಸಲು ಅನುಮತಿ ನೀಡಬೇಕು ಎಂದು ಕೋರಿದರು.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಶ್ರೀ ಶ್ರೀ ರವಿಶಂಕರ್ ಮೇಲೆ ಮೇಲ್ನೋಟಕ್ಕೆ ಯಾವುದೇ ಆರೋಪ ಕಾಣುತ್ತಿಲ್ಲ. ವಿಶೇಷ ಸರ್ಕಾರಿ ಅಭಿಯೋಜಕರು ನೇರವಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಪೂರಕವಾಗಿ ದಾಖಲೆಗಳನ್ನು ಒದಗಿಸದ ಹೊರತು ಆರೋಪವಿಲ್ಲದೇ ಶ್ರೀ ರವಿಶಂಕರ್ ಅವರನ್ನು ಪ್ರಕರಣದಲ್ಲಿ ಎಳೆದು ತರಲಾಗದು. ಹೀಗಾಗಿ, ಮುಂದಿನ ವಿಚಾರಣೆವರೆಗೆ ರವಿಶಂಕರ್ ಅವರ ವಿರುದ್ಧದ ತನಿಖೆಗೆ ತಡೆ ನೀಡಲಾಗಿದೆ ಎಂದು ಜನವರಿ 13ರಂದು ನ್ಯಾಯಾಲಯ ಮಧ್ಯಂತರ ಆದೇಶ ಮಾಡಿತ್ತು.