ಸುದ್ದಿಗಳು

ಕೆರೆ ಒತ್ತುವರಿ ಆರೋಪ: ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ವಿರುದ್ಧ ಸದ್ಯಕ್ಕಿಲ್ಲ ಕ್ರಮ

ಒತ್ತುವರಿ ಆರೋಪ ಸಂಬಂಧ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀ ಶ್ರೀ ರವಿಶಂಕರ್ ಕೋರಿದ್ದಾರೆ.

Bar & Bench

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು, ಕೆರೆ ಒತ್ತುವರಿ ಮಾಡಿದ ಆರೋಪ ಪ್ರಕರಣಕ್ಕೆ ಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಅವರ ವಿರುದ್ಧ ಜನವರಿ 21ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಪೋರ್ಸ್‌ಗೆ (ಬಿಎಂಟಿಎಫ್) ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಒತ್ತುವರಿ ಆರೋಪ ಸಂಬಂಧ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀ ರವಿಶಂಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ರವಿಶಂಕರ್ ಗುರೂಜಿ ಪರ ವಕೀಲ ಪಿ ಪ್ರಸನ್ನಕುಮಾರ್ ಅವರು “ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ ನೀಡಿದ ಆದೇಶದ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಒತ್ತುವರಿಗೂ ರವಿಶಂಕರ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ಆಧಾರಗಳಲ್ಲಿದೆ ಎಫ್ಐಆರ್ ದಾಖಲಿಸಲಾಗಿದೆ” ಎಂದರು.

ಆಗ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎ ಬೆಳ್ಳಿಯಪ್ಪ ಅವರು “ಶ್ರೀ ರವಿಶಂಕರ್ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕರು ಎಂದು ಸಮರ್ಥನೆ” ನೀಡಿದರು.

ಅರ್ಜಿದಾರರ ವಿರುದ್ಧ ದಾಖಲೆಗಳಿದ್ದರೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ಪೀಠವು ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತು. ಅಲ್ಲದೆ, ಅಲ್ಲಿವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಬಿಎಂಟಿಎಫ್ ಗೆ ನಿರ್ದೇಶಿಸಿತು.