HD Kumaraswamy Karnataka HC 
ಸುದ್ದಿಗಳು

ಎಚ್‌ಡಿಕೆ ವಿರುದ್ಧದ ಭೂಹಗರಣ: ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿಗೆ ನಿರ್ದೇಶಿಸಿದ ಹೈಕೋರ್ಟ್‌

'ರಾಮನಗರ ತಾಲ್ಲೂಕಿನಲ್ಲಿ ಸರ್ಕಾರವು ಇದುವರೆಗೂ ಒಂದೇ ಒಂದು ಇಂಚು ಭೂಮಿಯನ್ನೂ ತನ್ನ ಸುಪರ್ದಿಗೆ ಪಡೆದಿಲ್ಲ. ಯಾರನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ?' ಎಂದು ಪ್ರಶ್ನಿಸಿದ ಹಿರಿಯ ವಕೀಲ ಬಸವರಾಜು.

Bar & Bench

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ ಸಿ ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಭೂಮಿ ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಎಸ್‌ ಆರ್‌ ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

“ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಚನೆ ಅಥವಾ ಸಕ್ಷಮ ಪ್ರಾಧಿಕಾರದಿಂದ ಯಾವುದಾದರೂ ವರದಿಯನ್ನು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ವಿ.ರೋಣ್‌ ಅವರು ಪಡೆದು ನ್ಯಾಯಾಲಯಕ್ಕೆ ತಿಳಿಸಬಹುದು. ಈ ನಡುವೆ, ಪ್ರಕರಣದ ಬಗ್ಗೆ ಮಾಹಿತಿ ನೀಡಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು” ಎಂದು ನ್ಯಾಯಾಲಯ ನಿರ್ದೇಶಿಸಿದ್ದು, ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ, ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಎಸ್‌ ಬಸವರಾಜು ಅವರು “ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿ 71 ಎಕರೆ ಭೂಮಿ ಒತ್ತುವರಿಯಾಗಿದ್ದು, ಇದರಲ್ಲಿ 14 ಎಕರೆ ಹೊರತುಪಡಿಸಿ ರಾಜ್ಯ ಸರ್ಕಾರವು ಇದುವರೆಗೂ ಒಂದೇ ಒಂದು ಇಂಚು ಭೂಮಿಯನ್ನೂ ತನ್ನ ಸುಪರ್ದಿಗೆ ಪಡೆದಿಲ್ಲ. ಯಾರನ್ನು ರಕ್ಷಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ? ನಾವು ಸಂದೇಶಕಾರರಾಗಿ ಕೆಲಸ ಮಾಡುತ್ತಿದ್ದೇವೆ. ಸರ್ಕಾರಕ್ಕೆ ತನ್ನ ಭೂಮಿ ವಶಕ್ಕೆ ಪಡೆಯುವ ಇಚ್ಛೆ ಇಲ್ಲದಿರುವಾಗ ಏನು ಮಾಡಲಾಗುತ್ತದೆ. ನಮಗೆ ಸಾಕಾಗಿ ಹೋಗಿದೆ” ಎಂದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ವಿ.ರೋಣ್‌ ಅವರು “ವಿಭಾಗೀಯ ಪೀಠವು ಮಾಡಿರುವ ಆದೇಶವನ್ನು ಅನುಪಾಲಿಸಲಾಗಿದೆ. ಈಗ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಊರ್ಜಿತವಾಗುವುದಿಲ್ಲ. ಬೇಕಿದ್ದರೆ ಹಾಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏನೆಲ್ಲಾ ಕ್ರಮಕೈಗೊಂಡಿದ್ದಾರೆ ಎಂದು ಖುದ್ದು ಹಾಜರಾಗಿ ನ್ಯಾಯಾಲಯಕ್ಕೆ ವಿವರಿಸಲಿದ್ದಾರೆ” ಎಂದರು.

ವಿಚಾರಣೆಯ ಒಂದು ಹಂತದಲ್ಲಿ ಪೀಠವು ಸರ್ಕಾರವನ್ನು ಕುರಿತು “ಪ್ರತಿವಾದಿ/ಆರೋಪಿಗಳ ಕಡೆ ಸಾಕ್ಷಿ ಇದ್ದರೆ ಅವರೇಕೆ ಸಾಕ್ಷಿ ಪೆಟ್ಟಿಗೆಯಲ್ಲಿ ಬಂದು ನಿಂತು ಪ್ರಮಾಣ ಮಾಡಿ ಹೇಳಬಾರದು? ಆತ್ಮ ಮತ್ತು ಹೃದಯ ಮುಟ್ಟಿ ಹೇಳಲಿ, ಸತ್ಯ ಹೊರಬರಲಿದೆ. ಇವರನ್ನೆಲ್ಲಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿಬಿಟ್ಟರೆ ಸರಿಯಾಗುತ್ತೆ. ಇಷ್ಟೆ, ಇಲ್ಲಿ ಬೇರೇನೂ ಇಲ್ಲ” ಎಂದು ಮೌಖಿಕವಾಗಿ ಹೇಳಿತು.