ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಅರಣ್ಯ ಪ್ರದೇಶದ ಹೊಸಹುಡ್ಯ ಗ್ರಾಮದಲ್ಲಿ ಒತ್ತುವರಿ ಮಾಡಿದ್ದಾರೆ ಎನ್ನಲಾದ 59 ಎಕರೆ ಸರ್ಕಾರಿ ಜಮೀನನ್ನು ಸರ್ವೇ ನಡೆಸಲು ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುವಂತೆ ರಾಜ್ಯ ಪರಿಸರ ಮತ್ತು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಪರಿಸರ ಮತ್ತು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ 2025ರ ಸೆಪ್ಟೆಂಬರ್ 19ರಂದು ಬರೆದಿರುವ ಪತ್ರ ರದ್ದುಪಡಿಸುವಂತೆ ಕೋರಿ ಪ್ರಕರಣದ ಮೂಲ ದೂರುದಾರಾಗಿರುವ ಶ್ರೀನಿವಾಸಪುರದ ಕೆ ವಿ ಶಿವಾರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ವಿಚಾರಣೆಗೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾಗಿರುವ ರಾಜ್ಯ ಪರಿಸರ ಮತ್ತು ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ಹಿನ್ನೆಲೆ: ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಹೊಸಹುಡ್ಯ ವ್ಯಾಪ್ತಿಯ 59 ಎಕರೆ ಅರಣ್ಯ ಜಮೀನು ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೇ ನಡೆಸಲು 2010 ಮತ್ತು 2013ರಲ್ಲಿ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಸರ್ವೇ ನಡೆಸಲು ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗಿತ್ತು. ಸಮಿತಿಯು ಸರ್ವೇ ನಡೆಸುವುದು ಬಾಕಿಯಿತ್ತು.
ಈ ಮಧ್ಯೆ ಅರಣ್ಯ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರಿಗೆ 2025ರ ಸೆಪ್ಟೆಂಬರ್ 19ರಂದು ಪತ್ರ ಬರೆದಿದ್ದರು. ಕೋಲಾರ ಜಿಲ್ಲೆಯ ಶ್ರಿನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ರಾಜ್ಯ ಅರಣ್ಯ ಪ್ರದೇಶದಲ್ಲಿ ಹೊಸಹೂಡ್ಯ ಗ್ರಾಮದ ಸರ್ವೇ ನಂ.1 ಮತ್ತು 2ರಲ್ಲಿರುವ ಕಂದಾಯ ಭೂಮಿ ಮತ್ತು ಅರಣ್ಯ ಪ್ರದೇಶದ ಗಡಿಯನ್ನು ಗುರುತಿಸಿ ಸರ್ವೇ ನಡೆಸಿ ನಕ್ಷೆ ಸಿದ್ಧಪಡಿಸಲು ಒಬ್ಬ ಸೂಕ್ತ ಅಧಿಕಾರಿಯನ್ನು ನೇಮಿಸಬೇಕು. ಜೊತೆಗೆ ಸೀಮಿತ ಅವಧಿಯೊಳಗೆ ಸರ್ವೇ ಕಾರ್ಯವನ್ನು ಕೈಗೊಂಡು ಅಧಿಕೃತವಾಗಿ ವರದಿಯೊಂದಿಗೆ ಸರ್ವೇ ನಕ್ಷೆಯನ್ನು ಸರ್ಕಾರಕ್ಕೆ ಸಲ್ಲಿಸಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಕೋರಿದ್ದರು. ಈ ಪತ್ರವನ್ನು ರದ್ದುಪಡಿಸುವಂತೆ ಕೋರಿ ಶಿವಾರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ.