Bangalore Riots | Courtesy: Prajwal Bhat 
ದಾವೆ

ಬೆಂಗಳೂರು ಗಲಭೆ: ಎನ್‌ಐಎ ಗೆ ಪ್ರಕರಣ ಹಸ್ತಾಂತರ ಕೋರಿದ್ದ ಅರ್ಜಿಗಳನ್ನು ಆಧರಿಸಿ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್‌

ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸುವಂತೆ ಕೋರಿಕೆ

Bar & Bench

ಕಳೆದ ಆಗಸ್ಟ್‌ 11ರಂದು ನಡೆದ ಬೆಂಗಳೂರು ಗಲಭೆ ವೇಳೆ ಸಂಭವಿಸಿದ ಅಪರಾಧಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿ ಗುರುವಾರ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತು.

ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸುವಂತೆ ಕೋರಿ ವಕೀಲ ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಮತ್ತು ಅಶೋಕ್ ಎಸ್ ಕಿಣಗಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಅಮೃತೇಶ್ ಅವರು ತಮ್ಮ ಅರ್ಜಿಯಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸುವಂತೆಯೂ ಕೋರಿದ್ದರು. ದೂರು ದಾಖಲಿಸಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮೂರು ದಿನ ತೆಗೆದುಕೊಂಡಿದ್ದು ಏಕೆ ಎಂದು ಪ್ರಶ್ನಿಸಿರುವ ಅರ್ಜಿದಾರರು ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸರಿಗೆ ವೈದ್ಯಕೀಯ ಸೌಲಭ್ಯ ಮತ್ತು ಪರಿಹಾರ ನೀಡಲು ಸೂಚಿಸುವಂತೆ ಮನವಿ ಮಾಡಿದ್ದಾರೆ.

ಘಟನೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರು ಗಾಯಗೊಂಡಿರುವುದರಿಂದ ಪ್ರಕರಣವನ್ನು ಎನ್‌ಐಎ ಅಥವಾ ಕೇಂದ್ರದ ಬೇರಾವುದಾದರೂ ಸಂಸ್ಥೆಗೆ ತನಿಖೆಗೆ ಒಪ್ಪಿಸಬೇಕು ಎಂದು ಶ್ರೀಧರ ಪ್ರಭು ಅವರು ಎರಡನೇ ಅರ್ಜಿ ಸಲ್ಲಿಸಿದ್ದರು.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ಮುಂದಿನ ವಿಚಾರಣೆಯ ವೇಳೆಗೆ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿತು.

ಆಗಸ್ಟ್‌ 28ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಆಗಸ್ಟ್ 11ರಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಪಿ ನವೀನ್ ಎಂಬಾತ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾದ ಫೇಸ್ ಬುಕ್ ಪೋಸ್ಟ್‌ ಹಾಕಿದ್ದಾನೆ ಎಂದು ಆರೋಪಿಸಿ 300 ಮಂದಿಯನ್ನೊಳಗೊಂಡ ಗುಂಪು ಪೂರ್ವ ಬೆಂಗಳೂರಿನ ಡಿ ಜೆ ಹಳ್ಳಿ ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ಕೈಗೊಂಡಿತ್ತು ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ತಿಳಿಸಿತ್ತು. ಮುಂದುವರಿದು ಉದ್ರಿಕ್ತರ ಗುಂಪು ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲೆ ದಾಳಿ ನಡೆಸಿ ಅವರ ಮನೆ ಹಾಗೂ ಆಸ್ತಿಗೆ ಹಾನಿ ಮಾಡಿತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮುಂದುವರಿದು ಉದ್ರಿಕ್ತರ ಗುಂಪು ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿತ್ತಲ್ಲದೇ, ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ನಡೆಸಿತು. ಪೊಲೀಸರ ಮೇಲೆ ಕಲ್ಲು ಮತ್ತು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, 80ಕ್ಕೂ ಹೆಚ್ಚು ಮಂದಿಯನ್ನು ಗಾಯಗೊಳಿಸಿತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.