JP Nadda and Karnataka HC 
ಸುದ್ದಿಗಳು

ಮತದಾರರಿಗೆ ಆಮಿಷ ಪ್ರಕರಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧದ ಪ್ರಕರಣ ವಜಾ ಮಾಡಿದ ಹೈಕೋರ್ಟ್‌

ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ ಎಂದು ಮತದಾರರನ್ನು ಕುರಿತು ನಡ್ಡಾ ಹೇಳಿದ್ದರು ಎಂದು ಆರೋಪಿಸಲಾಗಿತ್ತು.

Bar & Bench

ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪದ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.

ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಜೆ ಪಿ ನಡ್ಡಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.

ಜೆ ಪಿ ನಡ್ಡಾ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದರು. ವಕೀಲ ಎಂ ವಿನೋದ್ ಕುಮಾರ್ ವಕಾಲತ್ತು ವಹಿಸಿದ್ದರು.

ನಡ್ಡಾ ಅವರು ಭಾಷಣದ ಮೂಲಕ ಮತದಾರರಿಗೆ ಆಮಿಷ ಮತ್ತು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಅದನ್ನು ರುಜುವಾತುಪಡಿಸುವ ಅಂಶಗಳು ದೂರುದಾರರ ಬಳಿ ಇಲ್ಲ. ನಡ್ಡಾ ಅವರ ಭಾಷಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದರ ಬಗ್ಗೆಯೂ ಪುರಾವೆಗಳಿಲ್ಲ. ಅಲ್ಲದೇ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಅವರಿಂದ ಅನುಮತಿ ಪಡೆದುಕೊಳ್ಳುವಾಗ ಕಾನೂನು ನಿಯಮಗಳನ್ನು ಪಾಲಿಸಿಲ್ಲ. ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ ವಿಚಾರಣಾಧೀನ ನ್ಯಾಯಾಲಯದ ಕ್ರಮವೂ ದೋಷಪೂರಿತವಾಗಿದೆ ಎಂದು ನಡ್ಡಾ ಪರ ವಕೀಲರು ವಾದಿಸಿದ್ದರು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಐ ಬಿ ವೃತ್ತದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಜೆ ಪಿ ನಡ್ಡಾ ಅವರು ಡಬಲ್ ಎಂಜಿನ್ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ಅಭಿವೃದ್ಧಿ ಬೇಕಾದ್ರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು ಎನ್ನುವುದು ಆರೋಪವಾಗಿತ್ತು.

ಈ ಸಂಬಂಧ ಚುನಾವಣಾಧಿಕಾರಿಗಳು ಹರಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.