High Court of Karnataka 
ಸುದ್ದಿಗಳು

ಮಕ್ಕಳ ಅಪೌಷ್ಟಿಕತೆ ನಿವಾರಣೆ: ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್‌ ಕೋರಿಕೆ

ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಉನ್ನತ ಮಟ್ಟದ ಸಮಿತಿ ಶಿಫಾರಸ್ಸು ಮಾಡಿದರೆ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದ ಕೇಂದ್ರ ಸರ್ಕಾರ.

Bar & Bench

ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸ್ಸು ಮಾಡಲು ನೇಮಕ ಮಾಡಲಾಗಿರುವ ನಿವೃತ್ತ ನ್ಯಾಯಮೂರ್ತಿ ಎ ಎನ್ ವೇಣಗೋಪಾಲಗೌಡ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ಮನವಿ ಮಾಡಿದೆ.

ರಾಜ್ಯದಲ್ಲಿ ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ 2011ರಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್‌ ಅವರು “ಕಳೆದ ವಿಚಾರಣೆ ವೇಳೆ ನ್ಯಾಯಾಲಯ ಸಮಿತಿಗೆ ವರದಿ ಸಲ್ಲಿಸಲು ಸೂಚನೆ ನೀಡಿತ್ತು. ಆ ವರದಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠವು ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.

ಕೇಂದ್ರ ಸರ್ಕಾರದ ಪರ ವಕೀಲ ಉನ್ನಿಕೃಷ್ಣನ್ ಅವರು “ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದು ವೇಳೆ, ಉನ್ನತ ಮಟ್ಟದ ಸಮಿತಿ ಆ ಕುರಿತು ಶಿಫಾರಸ್ಸು ಮಾಡಿದರೆ, ಅದಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಪರ ವಕೀಲರು, ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ, ಶೌಚಗೃಹ ನಿರ್ಮಾಣ ಸೇರಿ ಇತರ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶಗಳನ್ನು ಪಾಲನೆ ಮಾಡಲಾಗಿದೆ. ಆ ಸಂಬಂಧ ಅನುಪಾಲನಾ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.