Darshan and Karnataka HC 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯಕೀಯ ವರದಿ; ವಿಚಾರಣೆ ಮುಂದೂಡಿಕೆ

ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್‌ ಅವರು “ದರ್ಶನ್‌ ಅವರ ವೈದ್ಯಕೀಯ ವರದಿಯ ಪ್ರತಿಯನ್ನು ನಮಗೆ ನೀಡಬೇಕು. ಅದನ್ನು ಪರಿಶೀಲಿಸಿ, ಅಗತ್ಯಬಿದ್ದರೆ ಆಕ್ಷೇಪಣೆ ಸಲ್ಲಿಸಲಾಗುವುದು. ಆನಂತರ ವಾದ ಮಂಡಿಸಲಾಗುವುದು” ಎಂದರು.

Bar & Bench

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಫಿಸಿಯೋಥೆರಪಿ ಹಾಗೂ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದುಎಂದು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ಸಲ್ಲಿಸಲಾಗಿರುವ ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.

ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಪೀಠವು ಮುಚ್ಚಿದ ಲಕೋಟೆಯಲ್ಲಿದ್ದ ವರದಿಯನ್ನು ಪರಿಶೀಲಿಸಿತು. ದರ್ಶನ್‌ಗೆ ಫಿಸಿಯೊಥೆರಪಿ ಹಾಗೂ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದೂ ಹೇಳಲಾಗಿದೆ ಎನ್ನುವ ಅಂಶವನ್ನು ಗಮನಿಸಿತು.

ಆಗ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್‌ ಅವರು “ದರ್ಶನ್‌ ಅವರ ವೈದ್ಯಕೀಯ ವರದಿಯ ಪ್ರತಿಯನ್ನು ನಮಗೆ ನೀಡಬೇಕು. ಅದನ್ನು ಪರಿಶೀಲಿಸಿ, ಅಗತ್ಯಬಿದ್ದರೆ ಆಕ್ಷೇಪಣೆ ಸಲ್ಲಿಸಲಾಗುವುದು. ಆನಂತರ ವಾದ ಮಂಡಿಸಲಾಗುವುದು” ಎಂದರು.

ಇದಕ್ಕೂ ಮುನ್ನ, ದರ್ಶನ್‌ ಪರ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು “ದರ್ಶನ್‌ ಅವರು ಬೆನ್ನು ಹುರಿ ಸಮಸ್ಯೆಯಿಂದ ಬಳಲುತ್ತಿದ್ದು, ವಿಜಯನಗರ ವೈದ್ಯಕೀಯ ಸಂಸ್ಥೆಯು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದೆ. ಶಸ್ತ್ರಚಿಕಿತ್ಸೆ ಮಾಡದಿದ್ದರೆ ಮೂತ್ರಪಿಂಡ ಮತ್ತಿತರ ಅಂಗಾಗಳಿಗೆ ಸಮಸ್ಯೆಯಾಗಲಿದೆ. ಬಳ್ಳಾರಿಯಲ್ಲಿ ಸೌಲಭ್ಯದ ಕೊರತೆಯಿರುವುದರಿಂದ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿಸಬೇಕು” ಎಂದರು.

ಉಭಯ ವಾದ ಆಲಿಸಿದ ಪೀಠವು ವೈದ್ಯಕೀಯ ವರದಿಯ ಪ್ರತಿಯನ್ನು ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೀಡಬೇಕು. ಅದನ್ನು ಪರಿಶೀಲಿಸಿ ಅವರು ವಾದ ಮಂಡನೆ ಮಾಡಲಿದ್ದಾರೆ ಎಂದು ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.