Karnataka High Court 
ಸುದ್ದಿಗಳು

ದಲಿತರ ಅವಹೇಳನ ಪ್ರಕರಣ: ಶಾಸಕ ಹರೀಶ್‌ ವಿರುದ್ಧ ಹೊಸದಾಗಿ ವಿಚಾರಣಾ ಪ್ರಕ್ರಿಯೆ ನಡೆಸಲು ಹೈಕೋರ್ಟ್‌ ನಿರ್ದೇಶನ

ಮಾದಿಗ ಸಮುದಾಯದ ಬಗ್ಗೆ ಹರೀಶ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಇದರ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಬಿ ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Bar & Bench

ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪ ಸಂಬಂಧ ಹರಿಹರ ಬಿಜೆಪಿ ಶಾಸಕ ಬಿ ಪಿ ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್‌ ಜಾರಿಗೊಳಿಸಿದ್ದ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಪಡಿಸಿದೆ.

ಪ್ರಕರಣ ರದ್ದುಕೋರಿ ಬಿ ಪಿ ಹರೀಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

2023ರ ಜೂನ್ 21ರಂದು ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಸಮನ್ಸ್‌ ಜಾರಿಗೊಳಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿತು. ಕೆಲ ತಾಂತ್ರಿಕ ಹಾಗೂ ಕಾನೂನನಾತ್ಮಕ ಪ್ರಕ್ರಿಯೆಗಳು ಪಾಲಿಸದ ಕಾರಣ ಜಿಲ್ಲಾ ನ್ಯಾಯಾಧೀಶರ ಆದೇಶ ರದ್ದುಪಡಿಸಲಾಗುತ್ತಿದೆ. ಆದರೆ, ವಿವೇಚನೆ ಬಳಿಸಿ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಬಗ್ಗೆ ಹೊಸದಾಗಿ ಕ್ರಮ ಕೈಗೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು. ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದಿಸಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಕೆಲ ಮುಖಂಡರು ಬಿ ಪಿ ಹರೀಶ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ಈ ವೇಳೆ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರೂ ದಲಿತರು ನಮಗೆ ಮತ ಹಾಕಿಲ್ಲ. ‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆʼ ಎಂದು ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.

ಈ ಸಂಬಂಧ ಬಿ ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಹರೀಶ್‌ ವಿರುದ್ಧ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿ ಹಾಗೂ ಐಪಿಸಿ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿತ್ತು. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಿ ಪಿ ಹರೀಶ್ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಪ್ರಕರಣದ ಎಫ್‌ಐಆರ್, ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್‌ ಜಾರಿಗೊಳಿಸಿದ ಜಿಲ್ಲಾ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಹರೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.