Vinay Kulkarni and Karnataka HC 
ಸುದ್ದಿಗಳು

ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ ಕುಲಕರ್ಣಿ ಕೋರಿಕೆ: ಸಿಬಿಐಗೆ ಹೈಕೋರ್ಟ್‌ ನೋಟಿಸ್‌

ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Bar & Bench

ಧಾರವಾಡ ಜಿಲ್ಲೆ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡುವಂತೆ ಕೋರಲಾದ ಮೇಲ್ಮನವಿಗೆ ಸಂಬಂಧಿಸಿದಂತೆ ಸಿಬಿಐಗೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್‌ ಜಾರಿ ಮಾಡಿದೆ.

ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರತಿವಾದಿ ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್‌ 7ಕ್ಕೆ ಮುಂದೂಡಿತು. ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ ಎಚ್‌ ಹನುಮಂತರಾಯ ವಾದ ಮಂಡಿಸಿದರು.

2016ರ ಜೂನ್ 15ರಂದು ನಡೆದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವರ್ಗಾಯಿಸಿತ್ತು. ಸಿಬಿಐ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದವು. ಆದರೆ, ಸುಪ್ರೀಂ ಕೋರ್ಟ್ 2021ರ ಆಗಸ್ಟ್‌ನಲ್ಲಿ ಜಾಮೀನು ಮಂಜೂರು ಮಾಡಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದೂ ಸೇರಿದಂತೆ ನಾಲ್ಕು ಷರತ್ತುಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿತ್ತು. ಈ ಷರತ್ತು ಸಡಿಲಿಸುವಂತೆ ಕೋರಿ ವಿನಯ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.