Karnataka High Court 
ಸುದ್ದಿಗಳು

ಮತದಾನ ದಿನದ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ‌ ಮಾರಾಟ ನಿರ್ಬಂಧ: ಸರ್ಕಾರದ ವಾದ ತಿರಸ್ಕರಿಸಿದ ಹೈಕೋರ್ಟ್‌

ಮತದಾನದ ದಿನವಾದ ಫೆಬ್ರವರಿ 16 ಮತ್ತು ಮತ ಎಣಿಕೆ ದಿನವಾದ ಫೆಬ್ರವರಿ 20ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಮಾತ್ರ ನಗರದಲ್ಲಿ ಮದ್ಯ ಮಾರಾಟ‌ಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಮಾಡಿದ ನ್ಯಾಯಾಲಯ.

Bar & Bench

ವಿಧಾನ ಪರಿಷತ್‌ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಆದೇಶವನ್ನು ಮತದಾನ ಮತ್ತು ಮತ ಎಣಿಕೆ ದಿನಕ್ಕೆ ಮಾತ್ರ ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ಬಂಧಿಸಿದೆ.

ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 5ರಿಂದ ಮತದಾನ ನಡೆಯುವ ಫೆಬ್ರವರಿ 16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಫೆಬ್ರವರಿ 20ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಚುನಾವಣೆ ಮುಕ್ತಾಯಕ್ಕೆ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ‌ ಮಾರಾಟ ನಿರ್ಬಂಧಿಸಬಹುದು ಎಂಬ ಸರ್ಕಾರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮತದಾನದ ದಿನವಾದ ಫೆಬ್ರವರಿ 16 ಮತ್ತು ಮತ ಎಣಿಕೆ ದಿನವಾದ ಫೆಬ್ರವರಿ 20ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಮಾತ್ರ ನಗರದಲ್ಲಿ ಮದ್ಯ ಮಾರಾಟ‌ಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಮಾಡಿತು. ಆ ಮೂಲಕ ನಗರ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ಆಯುಕ್ತರ ಆದೇಶವನ್ನು ಮಾರ್ಪಡಿಸಿತು.

ಮತದಾನ ಹಾಗೂ ಮತ ಎಣಿಕೆ ದಿನದಲ್ಲಿ ಆಹಾರ ಪೂರೈಸಲು ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಯಾವುದೇ ನಿರ್ಬಂಧವಿಲ್ಲ. ಇದರಿಂದ ಮದ್ಯ ಮಾರಾಟ ನಿಷೇಧ ಆದೇಶವನ್ನು ಪರಿಶೀಲನೆ ನಡೆಸಲಾಗಿದೆ. ಶಿಕ್ಷಕರ ಕ್ಷೇತ್ರದ ಮತದಾರರು ಶಿಕ್ಷಕರಾಗಿದ್ದು, ಮದ್ಯ ಮಾರಾಟ ನಿರ್ಬಂಧಿಸಿದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆ ಎಂದು ಭಾವಿಸಬೇಕಿಲ್ಲ. ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಇಷ್ಟು ದಿನದ ನಿರ್ಬಂಧ ಅಗತ್ಯವಿಲ್ಲ ಎಂದು ಆದೇಶದಲ್ಲಿ ಪೀಠ ಅಭಿಪ್ರಾಯಪಟ್ಟಿದೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು, ಚುನಾವಣೆ ಮುಕ್ತಾಯಕ್ಕೆ ಮುನ್ನ 48 ಗಂಟೆ ಅವಧಿಯಲ್ಲಿ ಹಾಗೂ ಮತ ಎಣಿಕೆ ದಿನದಂದು ಮದ್ಯ ಮಾರಾಟಕ್ಕೆ ನಿರ್ಬಂಧಿಸಬಹುದು ಎಂದು ಪೀಠದ ಗಮನಕ್ಕೆ ತಂದರು. ಈ ವಾದವನ್ನು ಪೀಠ ಒಪ್ಪಲಿಲ್ಲ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ಅವರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸಾರ್ವತ್ರಿಕ ಚುನಾವಣೆಯಲ್ಲ. ಇದರಲ್ಲಿ ಕೇವಲ 16 ಸಾವಿರ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ. 48 ಗಂಟೆಗಳ ಅವಧಿಯವರೆಗೆ ಮದ್ಯ ಮಾರಾಟ ನಿಷೇಧಿಸಿದರೆ ವರ್ತಕರು, ಉದ್ದಿಮೆದಾರರು ಸಾಕಷ್ಟು ತೊಂದರೆ ಅನುಭವಿಸಲಿದ್ದಾರೆ. ಹೀಗಾಗಿ, ಈ ಪ್ರಕರಣದಲ್ಲೂ ಕೇವಲ ಮತದಾನದ ದಿನದಂದು ಮಾತ್ರವೇ ನಿಷೇಧ ಅನ್ವಯಿಸಲು ನಿರ್ದೇಶಿಸಬೇಕು ಎಂದು ಕೋರಿದ್ದರು.