ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ್ ಪರಿಷತ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಅವರ ನಾಮಪತ್ರ ಅಕ್ರಮವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಮನವಿಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹಾಸನದ ಕುಂದೂರು ಗ್ರಾಮದ ಕೆ ಎಲ್ ಹರೀಶ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
“ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಮೇಲೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಚುನಾವಣಾ ತಕರಾರು ಅರ್ಜಿ ಸಲ್ಲಿಸುವ ಮೂಲಕ ಪರಿಹಾರ ಪಡೆಯಿರಿ" ಎಂದು ಪೀಠವು ಅರ್ಜಿದಾರರಿಗೆ ಸೂಚಿಸಿತು.
‘ಸೂರಜ್ ರೇವಣ್ಣ ಅವರು ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿರುವ ನಮೂನೆ 26ರ ಅಡಿಯಲ್ಲಿನ ಪ್ರಮಾಣ ಪತ್ರದಲ್ಲಿ ಅನೇಕ ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ. ಆದ್ದರಿಂದ, ಇವರ ನಾಮಪತ್ರ ತಿರಸ್ಕೃರಿಸಬೇಕು ಅಥವಾ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಇದನ್ನು ಆಧರಿಸಿ ನ್ಯಾಯಾಲಯವು ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯುಕ್ತರು ಹಾಗೂ ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಕಳೆದ ಶುಕ್ರವಾರ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯಿಸಲು ಆದೇಶಿಸಿತ್ತು.
ವಕೀಲ ಜಿ ದೇವರಾಜೇಗೌಡ ಅವರ ಮೂಲಕ ಸಲ್ಲಿಸಲಾಗಿದ್ದ ಮನವಿಯಲ್ಲಿ ಸೂರಜ್ ರೇವಣ್ಣ ಅವರು 2017ರಲ್ಲಿ ಸಾಗರಿಕಾ ಅವರೊಂದಿಗೆ ವಿವಾಹವಾಗಿದ್ದಾರೆ. ಆದರೆ, ಚುನಾವಣಾ ಅಫಿಡವಿಟ್‌ನಲ್ಲಿ ಪತ್ನಿ ಹಾಗೂ ಅವಲಂಬಿತರ ಹೆಸರಿನಲ್ಲಿರುವ ಆಸ್ತಿ ಮಾಹಿತಿ ಘೋಷಣೆ ಮಾಡಿಲ್ಲ ಎಂದು ದೂರಿದ್ದರು.
ಅಲ್ಲದೇ, ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕಾ ಕನ್ವೆನ್ಷನ್ ಹಾಲ್‌ನ ಪಾಲುದಾರ ಎಂದು ಸೂರಜ್ ಅವರು ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ. ಆದರೆ, ಉದ್ದೇಶಪೂರ್ವಕವಾಗಿ ಆ ಕನ್ವೆನ್ಷನ್ ಹಾಲ್‌ಗೆ ಸಂಬಂಧಿಸಿದ ಬ್ಯಾಂಕ್ ಖಾತೆ ನಿರ್ವಹಣೆ ಮಾಹಿತಿಯನ್ನು ಬಚ್ಚಿಟ್ಟಿದ್ದಾರೆ. ಸದರಿ ಕನ್ವೆನ್ಷನ್ ಹಾಲ್‌ಗೆ ಅವರು ಪಾಲುದಾರರಾಗಿದ್ದರೂ ಸಹಿ ಮಾಡುವ ಅಧಿಕಾರ ಸೂರಜ್ ಅವರಿಗೆ ಮಾತ್ರ ಇದೆ. ಇದನ್ನು ಅವರು ಚುನಾವಣಾ ಅಫಿಡವಿಟ್‌ನಲ್ಲಿ ಘೋಷಿಸಿಲ್ಲ. ಇದು ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 33(ಎ) ಮತ್ತು 125(ಎ) ಗೆ ವಿರುದ್ಧವಾಗಿದೆ. ಹೀಗಾಗಿ, ಸೂರಜ್ ಅವರ ಉಮೇದುವಾರಿಕೆಯನ್ನು ತಿರಸ್ಕರಿಸಬೇಕು ಎಂದು ಅರ್ಜಿದಾರರು ಕೋರಿದ್ದರು.