Prajwal Revanna Facebook
ಸುದ್ದಿಗಳು

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರು ಪ್ರಜ್ವಲ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಮನವಿ ಮಾಡಿದರು. ಜೈಲು ಅಧಿಕಾರಿ ಮನವಿ ಮಾಡಲು ಸೂಚಿಸಿದ ನ್ಯಾಯಾಲಯ.

Bar & Bench

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶನಿವಾರ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ತನಿಖೆಗಾಗಿ ಜೂನ್‌ 24ರಿಂದ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಪ್ರಜ್ವಲ್‌ರನ್ನು ತನಿಖಾಧಿಕಾರಿಗಳು ವಿಶೇಷ ಮ್ಯಾಜಿಸ್ಟ್ರೇಟ್‌ ಕೆ ಎನ್‌ ಶಿವಕುಮಾರ್‌ ಮುಂದೆ ಹಾಜರುಪಡಿಸಿದರು.

ಎಸ್‌ಐಟಿ ಅಧಿಕಾರಿಗಳು ಆರೋಪಿ ಪ್ರಜ್ವಲ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಬಹುದು ಎಂದು ಪೀಠಕ್ಕೆ ವಿವರಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಲಯವು ಜುಲೈ 8ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತು.

ಈ ಮಧ್ಯೆ, ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರು ಪ್ರಜ್ವಲ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಮನವಿ ಮಾಡಿದರು.

ಇದಕ್ಕೆ ಪೀಠವು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಸೂಚಿಸಿತು. ಒಂದೊಮ್ಮೆ ಜೈಲು ಅಧಿಕಾರಿಗಳು ಆಸ್ಪತ್ರೆಗೆ ಸೇರಿಸಲು ಅವಕಾಶ ನೀಡದಿದ್ದಲ್ಲಿ ಸೋಮವಾರ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಆರೋಪಿ ಪ್ರಜ್ವಲ್‌ರನ್ನು ಎಸ್‌ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.

ವಿದೇಶದಿಂದ ಮರಳುತ್ತಲೇ ಮೇ 21ರಂದು ಬಂಧಿತರಾಗಿದ್ದ ಪ್ರಜ್ವಲ್‌ರನ್ನು ಮೇ 31ರಿಂದ ಜೂನ್‌ 10ರವರೆಗೆ ಎಸ್‌ಐಟಿ ವಶಕ್ಕೆ ನೀಡಲಾಗಿತ್ತು. ಆನಂತರ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಜೂನ್‌ 13ರಿಂದ 18ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿತ್ತು. ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಜೂನ್‌ 24ರವರೆಗೆ ಎಸ್‌ಐಟಿ ವಶಕ್ಕೆ ನೀಡಲಾಗಿತ್ತು. ತದನಂತರ ನಾಲ್ಕನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ನ್ಯಾಯಾಲಯವು ಜೂನ್‌ 25ರಿಂದ 29ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿತ್ತು.