Mysore Urban Development Authority & CM Siddaramaiah 
ಸುದ್ದಿಗಳು

ಮುಡಾ ಪ್ರಕರಣ: ʼಬಿʼ ರಿಪೋರ್ಟ್‌ ಅಂಗೀಕಾರ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಕದತಟ್ಟಿದ ಸ್ನೇಹಮಯಿ ಕೃಷ್ಣ

ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆ.12ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ʼಬಿʼ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ.

Bar & Bench

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಸಂಬಂಧ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕಟುಂಬ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ ʼಬಿʼ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸ್ನೇಹಮಯಿ ಕೃಷ್ಣ, ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಹೀಗಾಗಿ, ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಸಲ್ಲಿಸಿರುವ ʼಬಿʼ ರಿಪೋರ್ಟ್‌ ಅನ್ನು ಪಡೆದು ಪರಿಶೀಲಿಸಬೇಕು. ʼಬಿʼ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೇ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಅರ್ಜಿಯಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತದ ಪೊಲೀಸ್‌ ಅಧೀಕ್ಷಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ, ವಿವಾದಿತ ಜಮೀನಿನ ಮೂಲ ಮಾಲೀಕ ಜೆ ದೇವರಾಜು, ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್‌ ಕುಮಾರ್‌ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಪ್ರಕರಣದ ಹಿನ್ನೆಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಸ್ವಾಧೀನಪಡಿಸಿಕೊಂಡು, ಅದರ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಹೀಗಾಗಿ, ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ನಂತರ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ, 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆಗಸ್ಟ್‌ 17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್‌ 19ರಂದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪೊಲೀಸ್‌ ತನಿಖೆಗೆ ಅನುಮತಿಸಿ 2024ರ ಸೆಪ್ಟೆಂಬರ್‌ 24ರಂದು ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು.