“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಹಾಗಾಗಿ, ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು” ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯಕ್ಕೆ ಸೋಮವಾರ ಖಾಸಗಿ ದೂರು ಸಲ್ಲಿಸಿದ್ದಾರೆ.
ಅಬ್ರಹಾಂ ಸಲ್ಲಿಸಿರುವ ದೂರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಮಂಗಳವಾರ ಪರಿಶೀಲನೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಸೇರಿದಂತೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 120ಬಿ, 166, 416, 417, 420, 403, 423, 465, 468 (ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳಾದ 61 (2), 198, 319, 318, 314, 322, 332, 336) ಜೊತೆಗೆ ಭ್ರಷ್ಟಾಚಾರ ನಿರೋಧ ಕಾಯಿದೆ ಸೆಕ್ಷನ್‌ಗಳಾದ 9 ಮತ್ತು 13ರ ಅಡಿ ಸಂಜ್ಞೇ ಪರಿಗಣಿಸುವಂತೆ ಕೋರಲಾಗಿದೆ.
ಈಚೆಗೆ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ಇದರ ವಿಚಾರಣೆಯನ್ನೂ ವಿಶೇಷ ನ್ಯಾಯಾಲಯ ನಾಳೆ ಮುಂದುವರಿಸಲಿದೆ.