ರಾಜ್ಯದಾದ್ಯಂತ ಡಿಸೆಂಬರ್ 9ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ದಾವೆ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲೂ ಭೌತಿಕ ಮತ್ತು ವರ್ಚುವಲ್ ವಿಧಾನಗಳೆರಡರ ಮೂಲಕವೂ ವಿಚಾರಣೆ ನಡೆಯಲಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.
ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವ ಮೂಲಕ ಜನರು ತಮ್ಮ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.
ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿಯಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕಾಗಿ ಸಂಬಂಧಿತ ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಎನ್‌ಐ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಮತ್ತು ಕುಡಿಯುವ ನೀರಿನ ಬಿಲ್, ವೈವಾಹಿಕ ವಿವಾದಗಳು, ಭೂ ಸ್ವಾಧೀನ, ಕಂದಾಯ ಹಾಗೂ ಇತರೆ ಸಿವಿಲ್ ಪ್ರಕರಣಗಳು ಸೇರಿದಂತೆ ಭಿನ್ನ ರೀತಿಯ ಪ್ರಕರಣಗಳನ್ನು ಇತ್ಯರ್ಥಕ್ಕೆ ಪರಿಣಿಸಲಾಗುತ್ತದೆ.
ಪ್ರಕರಣಗಳು ಅಂದೇ ತ್ವರಿತವಾಗಿ ಇತ್ಯರ್ಥವಾಗುತ್ತವೆ. ವ್ಯಾಜ್ಯ ಪೂರ್ವ ಪ್ರಕರಣಗಳಾದರೆ ನ್ಯಾಯಾಲಯದ ಶುಲ್ಕ ಪಾವತಿಸುವ ಅಗತ್ಯವಿಲ್ಲ, ಲೋಕ ಅದಾಲತ್‌ನಲ್ಲಿ ಪ್ರಕರಣಗಳು ಇತ್ಯರ್ಥವಾದರೆ ಈಗಾಗಲೇ ಪಾವತಿಸಲಾಗಿರುವ ನ್ಯಾಯಾಲಯದ ಶುಲ್ಕವನ್ನು ಮರಳಿಸಲಾಗುತ್ತದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.