Karnataka HC and Karnataka Examinations Authority 
ಸುದ್ದಿಗಳು

ವೃತ್ತಿಪರ ಕೋರ್ಸ್‌ಗಳಿಗೆ ಹೊಸದಾಗಿ ರ‍್ಯಾಂಕ್ ಪಟ್ಟಿ: ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ ಸರ್ಕಾರ

ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಬಿ ತಿಮ್ಮೇಗೌಡರ ಅಧ್ಯಕ್ಷತೆಯ ಐವರ ಸಮಿತಿಯು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದಕ್ಕಾಗಿ ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದ ಎಎಜಿ.

Bar & Bench

ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ಸಮನ್ವಯ (ಪರಿಹಾರ) ಯೋಜನೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಗುರುವಾರ ರಾಜ್ಯ ಸರ್ಕಾರ ಸಲ್ಲಿಸಿದೆ.

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರ‍್ಯಾಂಕ್ ಪಟ್ಟಿ ತಯಾರಿಸಲು 2021ರ ಪುನರಾವರ್ತಿತ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ.50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎನ್ನುವ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ಪೀಠವು ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಬಿ ತಿಮ್ಮೇಗೌಡರ ಅಧ್ಯಕ್ಷತೆಯ ಐವರ ಸಮಿತಿಯು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದಕ್ಕಾಗಿ ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು.

ಅಲ್ಲದೆ, ಸಿಇಟಿ ರ‍್ಯಾಂಕ್ ಬಿಕ್ಕಟ್ಟು ಪರಿಹರಿಸಲು ಅಗತ್ಯವಾದ ಸಮನ್ವಯ ಸೂತ್ರವೊಂದನ್ನು ರೂಪಿಸಲಾಗಿದೆ. ಆ ಕುರಿತ ವಿವರಗಳು ವರದಿಯಲ್ಲಿದೆ ಎಂದು ಪೀಠಕ್ಕೆ ವಿವರಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಪುನರಾವರ್ತಿತ ವಿದ್ಯಾರ್ಥಿಗಳನ್ನು ದೃಷ್ಟಿಯಿಲ್ಲಿಟ್ಟುಕೊಂಡು ಯೋಜನೆಯೊಂದನ್ನು (ಪರಿಹಾರ) ರೂಪಿಸಲಾಗುವುದು. ಇದನ್ನು ಪ್ರತಿವಾದಿ ವಿದ್ಯಾರ್ಥಿಗಳು ಒಪ್ಪಿದರೆ ಸಮಸ್ಯೆ ಬಗೆಹರಿಸಬಹುದು ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಕಳೆದ ವಿಚಾರಣೆಯಲ್ಲಿ ತಿಳಿಸಿತ್ತು.