ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ [ಕುಲದೀಪ್ ಸಿಂಗ್ ಸೆಂಗಾರ್ ಮತ್ತು ಸಿಬಿಐ ನಡುವಣ ಪ್ರಕರಣ].
ಇದು ನೈತಿಕ ಭ್ರಷ್ಟತೆಯ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣ ಎಂದ ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ವಿ ಹಾಗೂ ಎನ್ ವಿ ಅಂಜಾರಿಯಾ ಅವರಿದ್ದ ಪೀಠ ಪರಿಹಾರ ನೀಡಲು ನಿರಾಕರಿಸಿತು.
ಆದರೆ, ಸೆಂಗರ್ ಅವರ ದೋಷಾರೋಪಣೆ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಇದೆ ಎಂದ ಸುಪ್ರೀಂ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ಹೆಚ್ಚಿಸುವಂತೆ ಸಂತ್ರಸ್ತೆ ಪರವಾಗಿ ಸಲ್ಲಿಸಿರುವ ಮೇಲ್ಮನವಿಯೊಂದಿಗೆ ಈ ಮೇಲ್ಮನವಿಯನ್ನು ಆದ್ಯತೆಯ ಮೇರೆಗೆ ವಿಚಾರಣೆ ನಡೆಸುವಂತೆ ಸೂಚಿಸಿತು.
ಸಂತ್ರಸ್ತೆ ಪರ ಸಲ್ಲಿಸಲಾದ ಮೇಲ್ಮನವಿಯನ್ನು ಹೈಕೋರ್ಟ್‌ನಲ್ಲಿ ಉಲ್ಲೇಖಿಸಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್ ಒಂದು ವಾರದೊಳಗೆ ದೆಹಲಿ ಹೈಕೋರ್ಟ್ ಈ ಮೇಲ್ಮನವಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದೆ. ಅಗತ್ಯವಿದ್ದರೆ, ಎರಡೂ ಮೇಲ್ಮನವಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಪೀಠದ ಸಂಯೋಜನೆಯಲ್ಲಿ ಬದಲಾವಣೆ ಮಾಡಬಹುದೆಂದೂ ಹೇಳಿದೆ.
ಸೆಂಗರ್ ಪರವಾಗಿ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ ದವೆ, ತಮ್ಮ ಕಕ್ಷಿದಾರ 10 ವರ್ಷಗಳ ಶಿಕ್ಷೆಯಲ್ಲಿ ಈಗಾಗಲೇ 9 ವರ್ಷ 7 ತಿಂಗಳು ಪೂರ್ಣಗೊಳಿಸಿದ್ದಾರೆ. ಆದರೆ ಜೈಲಿನಲ್ಲಿ ಕಳೆದ ಅವಧಿಗೆ ಮಹತ್ವ ನೀಡಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಕರಣದ ಉಳಿದ ಆರೋಪಿಗಳಿಗೆ ಜಾಮೀನು ನೀಡಿರುವ ವಿಚಾರವನ್ನೂ ಅವರು ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಶಿಕ್ಷೆ ಹೆಚ್ಚಿಸುವಂತೆ ಪೀಡಿತರ ಪರವಾಗಿ ಸಲ್ಲಿಸಿರುವ ಮೇಲ್ಮನವಿ ಫೆಬ್ರವರಿ 11ರಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದರು.
ಹಿನ್ನೆಲೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯನ್ನು ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ 20 ಜೂನ್ 2017ರಲ್ಲಿ ಅಪಹರಿಸಿ ಅತ್ಯಾಚಾರ ಮಾಡಿದ್ದ. ಅಲ್ಲದೆ ಆಕೆಯನ್ನು ₹ 60,000ಕ್ಕೆ ಮಾರಾಟ ಮಾಡಲಾಗಿತ್ತು. ಈ ಮಧ್ಯೆ ಆಕೆಗೆ ಮಾಖಿ ಪೊಲೀಸ್ ಠಾಣೆಯಲ್ಲಿ ರಕ್ಷಣೆ ದೊರೆತಿತ್ತು.
ಸಂತ್ರಸ್ತೆ ಚಲಿಸುತ್ತಿದ್ದ ಕಾರಿಗೆ, ನಂಬರ್ ಪ್ಲೇಟ್ ಇಲ್ಲದ ಲಾರಿಯೊಂದು 2018ರಲ್ಲಿ ಡಿಕ್ಕಿ ಹೊಡೆದು ಇಡೀ ಪ್ರಕರಣ ವಿವಾದದ ಸ್ವರೂಪ ಪಡೆದುಕೊಂಡಿತು. ಘಟನೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ಪರ ವಕೀಲರು ತೀವ್ರವಾಗಿ ಗಾಯಗೊಂಡರೆ ಆಕೆಯ ಇಬ್ಬರು ಚಿಕ್ಕಮ್ಮಂದಿರು ಇಹಲೋಕ ತ್ಯಜಿಸಿದ್ದರು. ಕೆಲ ದಿನಗಳ ಬಳಿಕ ವಕೀಲ ಕೂಡ ಮೃತಪಟ್ಟರು. ಘಟನೆಯ ಹಿಂದೆ ಸೆಂಗರ್ ಕೈವಾಡ ಇದೆ ಎಂದು ವಕೀಲರ ಪತ್ನಿ ದೂರಿದ್ದರು.
ಉನ್ನಾವ್ ಅತ್ಯಾಚಾರ ಘಟನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ವಿಚಾರಣೆಯನ್ನು ಆಗಸ್ಟ್ 2019ರಲ್ಲಿ, ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿತ್ತು. ದಿನವಹಿ ವಿಚಾರಣೆ ನಡೆಸಿ 45 ದಿನಗಳಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ಆದೇಶಿಸಿತ್ತು.
ಡಿಸೆಂಬರ್ 2019ರಲ್ಲಿ ಅಪ್ರಾಪ್ರೆ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಸೆಂಗರ್ ದೋಷಿ ಎಂದು ಸಾಬೀತಾಯಿತು. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು ಕಸ್ಟಡಿ ಸಾವಿನ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.
ಜನವರಿ 19 ರಂದು, ಕಸ್ಟಡಿ ಸಾವಿನ ಪ್ರಕರಣದಲ್ಲಿ ಸೆಂಗರ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದರಿಂದಾಗಿ ಅವರು ಸುಪ್ರೀಂ ಕೋರ್ಟ್‌ಗೆ ಪ್ರಸ್ತುತ ಮೇಲ್ಮನವಿ ಸಲ್ಲಿಸಿದ್ದರು.