Vidhana Soudha  
ಸುದ್ದಿಗಳು

ಎಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜೂ.12ರವರೆಗೆ ಯಾವುದೇ ಬಲವಂತದ ಕ್ರಮವಿಲ್ಲ: ಹೈಕೋರ್ಟ್‌ಗೆ ಸರ್ಕಾರದ ಭರವಸೆ

Bar & Bench

ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸದ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಭರವಸೆ ನೀಡಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಮೇ 31ರವರೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.

ರಾಜ್ಯ ಹೆಚ್ಚುವರಿ ಅಡ್ವೊಕೇಟ್‌ ಜನರಲ್ ರೊಬೆನ್‌ ಜೇಕಬ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಮೂಲ ಅರ್ಜಿಯ ವಿಚಾರಣೆಯನ್ನು 2024ರ ಜೂನ್‌ 11ಕ್ಕೆ ನಿಗದಿಪಡಿಸಲಾಗಿದೆ. ಹೀಗಾಗಿ, ಈ ಮಧ್ಯಂತರ ಅರ್ಜಿ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ಪೀಠವು ಜೂನ್‌ 11ರವರೆಗೂ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಕಾಲಾವಕಾಶ ನೀಡಬಹುದೇ? ಎಂದು ಪ್ರಶ್ನಿಸಿತು.

ಇದಕ್ಕೆ ಜೇಕಬ್‌ ಅವರು ಜೂನ್ 12ರವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ಪೀಠವು ವಿಚಾರಣೆ ಮುಂದೂಡಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮ ಮೀರಿ ಅರ್ಜಿದಾರ ಸಂಸ್ಥೆಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ, ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು ಎಂದು ಆಕ್ಷೇಪಿಸಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

ಎಚ್ಎಸ್‌ಆರ್‌ಪಿ ಅಳವಡಿಕೆಗೆ ಅನುಮತಿ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿ ವಿಚಾರಣೆ ಮುಂದೂಡಿತ್ತು. ಈ ಮಧ್ಯೆ ಸರ್ಕಾರ ಸಹ ಎಚ್‌ಎಸ್‌ಆರ್‌ಪಿ ಅಳಡಿಕೆಗೆ ಮೇ 31ರವರೆಗೆ ಗಡುವು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌, ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದೆ.