“ಕರ್ನಾಟಕದಲ್ಲಿದ್ದ ಮೇಲೆ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು” ಎಂದು ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ವಾಣಿಜ್ಯ ಮತ್ತು ಇತರೆ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂಬ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಭಾರತೀಯ ಚಿಲ್ಲರೆ ವ್ಯಾಪಾರಿಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆ 2022ಗೆ ತಿದ್ದುಪಡಿ ತರುವ ಮೂಲಕ 2024ರ ಫೆಬ್ರವರಿ 26ರಂದು ರಾಜ್ಯ ಸರ್ಕಾರ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮ ನಾಮಫಲಕಗಳಲ್ಲಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಭಾರತೀಯ ಚಿಲ್ಲರೆ ವ್ಯಾಪಾರಿಗಳ ಒಕ್ಕೂಟ ಸೇರಿ ಹಲವು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು, ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಇದೆ. ಆನಂತರ ರಾಜ್ಯದಲ್ಲಿ ಕನ್ನಡ ಅಭಿಯಾನ ಆರಂಭವಾಗಲಿದೆ. ಹಾಗಾಗಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಆಗ ಪ್ರಕರಣದ ದಾಖಲೆಗಳನ್ನು ಗಮನಿಸಿದ ಪೀಠವು “ನೀವು (ವಾಣಿಜ್ಯ ಸಂಸ್ಥೆಗಳು) ಕರ್ನಾಟಕದಲ್ಲಿ ವಹಿವಾಟು ನಡೆಸುತ್ತಿದ್ದ ಮೇಲೆ ನೀವು ಕನ್ನಡ ಭಾಷೆಯಲ್ಲಿ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು, ಅದಕ್ಕೆ ಯಾವುದೇ ವಿನಾಯಿತಿ ನೀಡಲಾಗದು” ಎಂದು ಮೌಖಿಕವಾಗಿ ಹೇಳಿದರು. ಅಲ್ಲದೆ, ಕನ್ನಡ ಭಾಷಾ ರಕ್ಷಣೆ ಸಂಬಂಧ ಶ್ರಮಿಸುತ್ತಿರುವ ಕನ್ನಡ ರಕ್ಷಣಾ ವೇದಿಕೆಯ ಹೋರಾಟವನ್ನು ಪ್ರಸ್ತಾಪಿಸಿದರು.
ತುರ್ತು ವಿಚಾರಣೆಯ ಮನವಿಯನ್ನು ನಯವಾಗಿ ತಳ್ಳಿಹಾಕಿದ ಪೀಠವು ಕಳೆದ ಮಾರ್ಚ್ 18ರಂದು ನೀಡಿದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಮುಂದುವರಿಸಿ ವಿಚಾರಣೆಯನ್ನು ಮುಂದೂಡಿತು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆ 2022ಕ್ಕೆ 2024ರಲ್ಲಿ ಮಾಡಿರುವ ತಿದ್ದುಪಡಿಯನ್ನು ಅರ್ಜಿದಾರರು ಪ್ರಶ್ನಿಸಿದ್ದು, ಅದು ಅಸಾಂವಿಧಾನಿಕ ಹಾಗೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ ಮತ್ತು ಟ್ರೇಡ್ ಮಾರ್ಕ್ ಕಾಯಿದೆಗೆ ವಿರುದ್ಧವಾಗಿದೆ. ಹಾಗಾಗಿ, ತಿದ್ದುಪಡಿ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ, ಜೂನ್ 2009ರಲ್ಲೂ ಸರ್ಕಾರ ಇಂತಹುದೇ ಪ್ರಯತ್ನ ನಡೆಸಿತ್ತು, ಆದರೆ ನ್ಯಾಯಾಲಯ ಅದನ್ನು ರದ್ದುಪಡಿಸಿತ್ತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.