ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡ ಬಿಜೆಪಿ ನಾಯಕರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಡಿ ಕೆ ಶಿವಕುಮಾರ್‌ಗೆ ಸೀಮಿತವಾಗಿ ಪ್ರಕರಣಕ್ಕೆ ತಡೆ ನೀಡಿತು.
ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲ ಎಚ್ ವಿ ಪ್ರವೀಣ್ ಕುಮಾರ್ ಅವರು “ಬಿಜೆಪಿ ನಾಯಕರು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದಾರೆ ಎಂಬ ಒಕ್ಕಣೆಯನ್ನು ಒಳಗೊಂಡ ಚಿತ್ರವನ್ನು ಕಾಂಗ್ರೆಸ್ ಅಧಿಕೃತ ಹ್ಯಾಂಡಲ್‌ನಿಂದ ಟ್ವೀಟ್ ಮಾಡಲಾಗಿದೆ. ಪ್ರಿಯಾಂಕಾ ಶ್ರೀವಾಸ್ತವ ಪ್ರಕರಣವನ್ನು ಉಲ್ಲೇಖಿಸಿ, ಪ್ರಕರಣ ದಾಖಲಿಸಲು ವಿಚಾರಣಾಧೀನ ನ್ಯಾಯಾಲಯ ಆದೇಶಿಸಿದೆ. ಸಿಆರ್‌ಪಿಸಿ ಸೆಕ್ಷನ್ 156 (3) ಅಡಿ ತನಿಖೆ ನಡೆಸಲು ಮೇಲ್ನೋಟಕ್ಕೆ ಪ್ರಕರಣ ಇದೆಯೇ ಎಂಬ ಅಂಶಗಳನ್ನು ಉಲ್ಲೇಖಿಸದೇ ಆದೇಶ ಮಾಡಲಾಗಿದೆ. ಪ್ರಕ್ರಿಯೆ ಅಗತ್ಯತೆ ಬಗ್ಗೆ ಮಾತ್ರ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಅಪರಾಧದ ಸಂತೃಪ್ತಿಯ ಬಗ್ಗೆ ಆದೇಶದಲ್ಲಿ ಏನನ್ನೂ ಹೇಳಿಲ್ಲ” ಎಂದರು.
ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು “ಪ್ರಿಯಾಂಕಾ ಶ್ರೀವಾಸ್ತವ ಪ್ರಕರಣದ ಆದೇಶವನ್ನು ವಿಚಾರಣಾಧೀನ ನ್ಯಾಯಾಲಯ ಸಂಪೂರ್ಣವಾಗಿ ಪಾಲಿಸಿಲ್ಲ. 6.1.2024ರಂದು ಪೊಲೀಸರಿಗೆ ನೀಡಿರುವ ದೂರನ್ನು ಪರಿಶೀಲಿಸಬಹುದು. ಮೊದಲಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅದಾದ ಐದು ದಿನಗಳ ಬಳಿಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದ್ದು, 21.1.024ರಂದು ದೂರುದಾರರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಪ್ರಿಯಾಂಕಾ ಶ್ರೀವಾಸ್ತವ ಪ್ರಕರಣವನ್ನು ಲಲಿತಾ ಕುಮಾರಿ ಪ್ರಕರಣದಲ್ಲಿನ ತೀರ್ಪಿನ ಜೊತೆ ಓದಬೇಕಾಗುತ್ತದೆ. ಪೊಲೀಸ್ ಅಧಿಕಾರಿಗೆ ಸೂಕ್ತ ಕಾಲಾವಕಾಶ ನೀಡಬೇಕು. ಪೊಲೀಸರ ನಿರ್ಧಾರದ ಬಗ್ಗೆ ತಿಳಿದುಕೊಳ್ಳುವವರೆಗೆ ದೂರುದಾರರು ಆತುರ ಮಾಡಲಾಗದು” ಎಂದರು.
ಪ್ರಕರಣದ ಹಿನ್ನೆಲೆ: ಮೂರು ದಶಕಗಳ ಹಿಂದೆ ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀಕಾಂತ್ ಪೂಜಾರಿಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿಯು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಆ ಸಂದರ್ಭದಲ್ಲಿ ಬಿಜೆಪಿ ನಾಯಕರು “ನಾನು ಕರಸೇವಕ ನನ್ನನ್ನೂ ಬಂಧಿಸಿ” ಎಂಬ ಒಕ್ಕಣೆ ಹೊಂದಿದ್ದ, ಭಿತ್ತಿಪತ್ರ ಹಿಡಿದು ಅಭಿಯಾನ ನಡೆಸಿದ್ದರು.
ಇದನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಫೋಟೊ ಬಳಸಿ “ನಾನು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ಅಕ್ರಮದಲ್ಲ ಪಾಲುದಾರ ನನ್ನನ್ನು ಬಂಧಿಸಿ”; ಶಾಸಕ ವಿ ಸುನೀಲ್ ಕುಮಾರ್ ಫೋಟೊ ಬಳಸಿ “ನಾನು ಪರಶುರಾಮ ಮೂರ್ತಿ ಕಂಚನ್ನು ಕದ್ದಿದ್ದೇನೆ; ಸಿಮೆಂಟ್ ಕದ್ದಿದ್ದೇನೆ ನನ್ನನ್ನು ಬಂಧಿಸಿ” ಎಂಬ ಒಕ್ಕಣೆಯ ಚಿತ್ರಗಳನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ ಆರ್ ನಾಯ್ಡು ವಿರುದ್ಧ ಬಿಜೆಪಿಯ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಘಟ್ಟ ನೀಡಿದ್ದ ಖಾಸಗಿ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್‌ಗಳಾದ 153(A), 504, 505(2), 464ರ ಅಡಿ ಪ್ರಕರಣ ಪ್ರಕರಣ ದಾಖಲಿಸಿದ್ದಾರೆ.