ಕಾನೂನು ವ್ಯವಸ್ಥೆಯೊಂದಿಗೆ ಸಂವಹನ ನಡೆಸುವ ದಾವೆದಾರರ ಅಗತ್ಯಗಳನ್ನು ಉತ್ತಮ ರೀತಿಯಲ್ಲಿ ಪರಿಹರಿಸಲು ತಾಂತ್ರಿಕ ಪ್ರಗತಿಯ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಶಾಜಿ ಪಿ ಚಾಲಿ ವಕೀಲರಿಗೆ ಕರೆ ನೀಡಿದ್ದಾರೆ.
ತಮ್ಮ ನಿವೃತ್ತಿ ಗೌರವಾರ್ಥ ಶುಕ್ರವಾರ ಆಯೋಜಿಸಲಾಗಿದ್ದ ಪೂರ್ಣ ನ್ಯಾಯಾಲಯವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಕರಣಗಳ ಬಾಕಿ ಕಡಿಮೆ ಮಾಡುವುದಕ್ಕಾಗಿ ಹಳೆಯ ಸಿವಿಲ್ ಮತ್ತು ಕ್ರಿಮಿನಲ್ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ನ್ಯಾಯಾಲಯಕ್ಕೆ ಬೆಂಬಲ ನೀಡಬೇಕೆಂದು ಅವರು ವಕೀಲರಿಗೆ ತಿಳಿಸಿದರು.
"ನಮ್ಮ ಕಾನೂನು ವ್ಯವಸ್ಥೆಯಲ್ಲಿನ ತಾಂತ್ರಿಕ ಪ್ರಗತಿಯನ್ನು ಬಳಸಿಕೊಳ್ಳಬೇಕು. ವಿಶೇಷವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೂಲಸೌಕರ್ಯ ಹಾಗೂ ತಾಂತ್ರಿಕ ಬೆಳವಣಿಗೆಗಳಿಗೆ ಸಾಕಷ್ಟು ಹಣವ ಒದಗಿಸುತ್ತಿರುವಾಗ ವಕೀಲ ಸಮುದಾಯ ಅದನ್ನು ಬಳಸಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಹಳೆಯ ಸಿವಿಲ್ ಮೇಲ್ಮನವಿಗಳು, ಕ್ರಿಮಿನಲ್ ಮೇಲ್ಮನವಿಗಳು ಮತ್ತು ಪರಿಷ್ಕರಣೆಗಳ ವಿಲೇವಾರಿಗೆ, ಇದು ಈ ನ್ಯಾಯಾಲಯದ ಮುಂದೆ ಇರುವ ಪ್ರಕರಣಗಳ ಒಟ್ಟು ಬಾಕಿಯನ್ನು ಹೆಚ್ಚಿಸುತ್ತದೆ" ಎಂದು ನ್ಯಾಯಾಧೀಶರು ಹೇಳಿದರು.
ಸಾರ್ವಜನಿಕರು ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಳ್ಳದಂತೆ ನೋಡಿಕೊಳ್ಳಲು ಪ್ರಕರಣಗಳ ತ್ವರಿತ ವಿಲೇವಾರಿ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
"ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮತೋಲನವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕರು ಇರಿಸಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಕರಣಗಳ ತ್ವರಿತ ವಿಲೇವಾರಿ ಅತ್ಯಗತ್ಯ ಪೂರ್ವಾಪೇಕ್ಷೆಯಾಗಿದೆ" ಎಂದು ನ್ಯಾಯಮೂರ್ತಿ ಚಾಲಿ ಹೇಳಿದರು.
ಈ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ವಿ ಭಟ್ಟಿ, ಅಡ್ವೊಕೇಟ್ ಜನರಲ್ ಕೆ ಗೋಪಾಲಕೃಷ್ಣ ಕುರುಪ್ ಅವರು ನ್ಯಾ. ಚಾಲಿ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.