Vidhana Soudha  
ಸುದ್ದಿಗಳು

ಪಾಕಿಸ್ತಾನ್‌ ಜಿಂದಾಬಾದ್‌ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಬೆಂಗಳೂರು ನ್ಯಾಯಾಲಯ

ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ ಎಸ್‌ ಮುನಾವರ್ ಅಹ್ಮದ್ ಅವರಿಗೆ ಜಾಮೀನು ಮಂಜೂರಾಗಿದೆ.

Bar & Bench

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ ಎಸ್‌ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ ವಿಜೇತ್‌ ಪುರಸ್ಕರಿಸಿದ್ದಾರೆ.

ಆರೋಪಿಗಳು ₹1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ದೇಶ ಬಿಟ್ಟು ಹೋಗಬಾರದು, ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. 

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ಪೊಲೀಸರು ಪ್ರಕರಣ ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಆರೋಪಿಗಳಿಗೆ ಸಿಆರ್‌ಪಿಸಿ ಸೆಕ್ಷನ್‌ 41ರ ಅನ್ವಯ ನೋಟಿಸ್‌ ನೀಡಿಲ್ಲ. ಅಂತೆಯೇ, ಆರೋಪಿಸಲಾದ ಘೋಷಣೆಯ ಮಾದರಿಯನ್ನು ಧ್ವನಿ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹೀಗಾಗಿ, ಇದು ಮೇಲ್ನೋಟಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣ ಎಂಬುದು ಸಾಬೀತಾಗುತ್ತದೆ ಎಂಬ ಅಂಶಗಳನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಪ್ರಕರಣ ಹಿನ್ನೆಲೆ: ಕಳೆದ ತಿಂಗಳ 27ರಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿತ್ತು. ಫಲಿತಾಂಶ ಪ್ರಕಟವಾದ ಬಳಿಕ, ವಿಜೇತ ಅಭ್ಯರ್ಥಿ ನಾಸೀರ್‌ ಹುಸೇನ್‌ ಪರ ಸಂಭ್ರಮಾಚರಿಸುವ ವೇಳೆ ಆರೋಪಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.