Pegasus and sc
Pegasus and sc 
ಸುದ್ದಿಗಳು

ಪೆಗಸಸ್‌ ಬೇಹುಗಾರಿಕೆ ಹಗರಣದ ತನಿಖೆಗೆ ನಿವೃತ್ತ ನ್ಯಾ. ರವೀಂದ್ರನ್‌ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿದ ಸುಪ್ರೀಂ

Bar & Bench

ಪೆಗಸಸ್‌ ಬೇಹುಗಾರಿಕಾ ಹಗರಣದ ತನಿಖೆಗಾಗಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಆರ್‌ ವಿ ರವೀಂದ್ರನ್‌ ನೇತೃತ್ವದಲ್ಲಿ ಮೂವರು ತಜ್ಞರ ಸಮಿತಿಯನ್ನು ರಚಿಸಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಹತ್ವದ ಆದೇಶ ಹೊರಡಿಸಿದೆ.

1976ನೇ ಶ್ರೇಣಿಯ ನಿವೃತ್ತ ಐಪಿಎಸ್‌ ಅಧಿಕಾರಿ ಅಲೋಕ್‌ ಜೋಷಿ, ಇಂಟರ್‌ನ್ಯಾಷನಲ್‌ ಆರ್ಗನೈಸೇಷನ್‌ ಆಫ್‌ ಸ್ಟಾಂಡರ್ಡೈಸೇಷನ್‌/ಇಂಟರ್‌ನ್ಯಾಷನಲ್‌ ಎಲೆಕ್ಟ್ರೊ-ಟೆಕ್ನಿಕಲ್‌ ಕಮಿಷನ್‌/ಜಾಯಿಂಟ್‌ ಟೆಕ್ನಿಕಲ್ ಉಪ ಸಮಿತಿಯ ಅಧ್ಯಕ್ಷ ಡಾ. ಸಂದೀಪ್‌ ಓಬೆರಾಯ್‌ ಸಮಿತಿಯ ಇತರೆ ಸದಸ್ಯರಾಗಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಹೇಳಿದೆ.

“ತಜ್ಞರ ಸಮಿತಿ ರಚನೆಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಲಾಗಿದೆ. ಅಲ್ಲದೇ, ಸ್ವತಂತ್ರ ಸದಸ್ಯರನ್ನು ನೇಮಿಸುವುದು ಕಷ್ಟಸಾಧ್ಯವಾದ ಕೆಲಸವಾಗಿತ್ತು. ಸುಪ್ರೀಂ ಕೋರ್ಟ್‌ ನಿಗಾವಣೆಯಲ್ಲಿ ತಜ್ಞರ ಸಮಿತಿ ಕಾರ್ಯಾಚರಣೆ ನಡೆಸಲಿದೆ” ಎಂದು ನ್ಯಾಯಾಲಯ ಹೇಳಿದೆ.

ಸಮಿತಿಯ ಕಾರ್ಯವ್ಯಾಪ್ತಿಯನ್ನು ಆದೇಶದಲ್ಲಿ ವಿವರವಾಗಿ ಸೂಚಿಸಲಾಗಿದೆ. ಸಮಿತಿಯು ಪ್ರಕರಣವನ್ನು ತ್ವರಿತಗತಿಯಲ್ಲಿ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಎಂಟು ವಾರಗಳ ನಂತರ ಪ್ರಕರಣವನ್ನು ಮರು ಪಟ್ಟಿ ಮಾಡುವಂತೆ ನ್ಯಾಯಾಲಯ ಆದೇಶ ಮಾಡಿದೆ.

“ರಾಷ್ಟ್ರೀಯ ಭದ್ರತೆಯ ಕಳಕಳಿಯನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರವು ನುಣಿಚಿಕೊಳ್ಳಲಾಗದು. ನ್ಯಾಯಿಕ ಪರಿಶೀಲನೆಯಿಂದ ತಪ್ಪಿಸಿಕೊಳ್ಳಲಾಗದು. ಕೇಂದ್ರ ಸರ್ಕಾರ ತನ್ನ ನಿಲುವನ್ನು ಸಮರ್ಥಿಸಿಕೊಳ್ಳಬೇಕಿತ್ತು” ಎಂದು ಪೀಠ ಅಭಿಪ್ರಾಯಪಟ್ಟಿತು.

ಪೆಗಸಸ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ, ಎಸ್ಐಟಿ ತನಿಖೆ ಸೇರಿದಂತೆ ವಿವಿಧ ಕೋರಿಕೆಗಳನ್ನು ಒಳಗೊಂಡ ವಿವಿಧ ಮನವಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿತು.

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವಕೀಲರು, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಸಾಂವಿಧಾನಿಕ ಹುದ್ದೆಗಳಲ್ಲಿರುವವರ ಮೇಲೆ ನಿಗಾ ಇಡಲು ಭಾರತ ಸರ್ಕಾರ ಸೇರಿದಂತೆ ಜಗತ್ತಿನಾದ್ಯಂತ ವಿವಿಧ ಸರ್ಕಾರಗಳು ಪೆಗಸಸ್‌ ಸಾಫ್ಟ್‌ವೇರ್‌ ನೆರವು ಪಡೆದಿವೆ ಎಂದು ಭಾರತದ ʼದಿ ವೈರ್‌ʼ ಸೇರಿದಂತೆ ವಿಶ್ವದ ಹದಿನಾರು ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳ ಒಕ್ಕೂಟ ತನಿಖಾ ವರದಿ ಪ್ರಕಟಿಸಿದ್ದವು.

ಆಯ್ದ ಮೊಬೈಲ್‌ ಸಂಖ್ಯೆಗಳ ಮೇಲೆ ನಿರ್ದಿಷ್ಟವಾಗಿ ಗುರಿ ಇರಿಸಲಾಗಿತ್ತು. ಕೆಲವು ನಂಬರ್‌ಗಳಿಗೆ ಪೆಗಸಸ್‌ ದಾಳಿ ಇಟ್ಟಿದ್ದು, ಮತ್ತೆ ಕೆಲವು ನಂಬರ್‌ಗಳ ಮೇಲೆ ದಾಳಿ ಯತ್ನ ನಡೆದಿದೆ ಎಂದು ಅದರ ವಿಶ್ಲೇಷಣೆ ನಡೆಸಿದ್ದ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ತಂಡ ಹೇಳಿತ್ತು.

ಇಸ್ರೇಲ್‌ ಮೂಲದ ಬೇಹು ತಂತ್ರಾಂಶ ಸಂಸ್ಥೆ ಎನ್‌ಎಸ್‌ಒ ತನ್ನ ಪೆಗಸಸ್‌ ಸ್ಪೈವೇರ್‌ಗೆ ಹೆಸರುವಾಸಿಯಾಗಿದ್ದು ಪರಿಶೀಲಿಸಿದ ಸರ್ಕಾರಗಳಿಗೆ ಮಾತ್ರ ಇದನ್ನು ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿತ್ತು. ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಆದರೂ ಇದು ಯಾವ ಸರ್ಕಾರಗಳಿಗೆ ತನ್ನ ವಿವಾದಿತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂಬುದನ್ನು ಬಹಿರಂಗಪಡಿಸಿಲ್ಲ.