Karnataka HC and Lokayukta
Karnataka HC and Lokayukta 
ಸುದ್ದಿಗಳು

ವೆಬ್‌ಸೈಟ್‌ನಲ್ಲಿ ಎಫ್‌ಐಆರ್‌ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

Bar & Bench

ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಬೆಂಗಳೂರಿನ ವಕೀಲ ಎಸ್ ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರನ್ನು (ಎಡಿಜಿಪಿ) ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂ ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು.

ಈ ಮಧ್ಯೆ, ಎಸಿಬಿಯನ್ನು ರದ್ದುಗೊಳಿಸಿ 2022ರ ಆಗಸ್ಟ್‌ 11ರಂದು ತೀರ್ಪು ನೀಡಿದ ಹೈಕೋರ್ಟ್, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ.  ಆದರೆ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನನೂಕೂಲವಾಗುತ್ತಿದೆ. ಈ ಬಗ್ಗೆ ಅರ್ಜಿದಾರರು 2022ರ ಸೆಪ್ಟೆಂಬರ್‌ 19ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಆದ್ದರಿಂದ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.