KSLU and Karnataka High Court 
ಸುದ್ದಿಗಳು

ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ ರಚನೆಗೆ ಕೋರಿಕೆ: ಕಾನೂನು ವಿವಿ, ಯುಜಿಸಿಗೆ ಹೈಕೋರ್ಟ್‌ ನೋಟಿಸ್‌

ಯುಜಿಸಿ (ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ನಿಯಮಗಳು) 2023ರ ಪ್ರಕಾರ ಪ್ರತಿ ಕಾನೂನು ವಿವಿ ಹಾಗೂ ಕಾಲೇಜುಗಳಲ್ಲಿ ಕುಂದುಕೊರತೆ ಪರಿಹಾರ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಿ ಅದಕ್ಕೆ ಒಂಬಡ್ಸಮನ್ ನೇಮಕ ಮಾಡಬೇಕು ಎಂಬುದು ಅರ್ಜಿದಾರರ ಮನವಿ.

Bar & Bench

ಹುಬ್ಬಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಅದರ ಅಧೀನದಲ್ಲಿ ಬರುವ ಕಾಲೇಜು ಮತ್ತು ಸಂಸ್ಥೆಗಳಲ್ಲಿ ‘ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ‘ಗಳನ್ನು ರಚಿಸುವಂತೆ ನಿರ್ದೇಶನ ನೀಡಲು ಕೋರಿ ಕಾನೂನು ಪದವಿ ವಿದ್ಯಾರ್ಥಿಯೊಬ್ಬರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) (ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ನಿಯಮಗಳು) 2023ರ ಪ್ರಕಾರ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಹಾಗೂ ರಾಜ್ಯಾದ್ಯಂತ ಇರುವ ಅದರ ಅಧೀನದ ಕಾಲೇಜು ಮತ್ತು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಕುಂದುಕೊತೆ ಪರಿಹಾರ ಸಮಿತಿಗಳನ್ನು ರಚಿಸಲು ಕಾನೂನು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ಬಿಎಂಎಸ್ ಕಾನೂನು ಕಾಲೇಜಿನ ಮೂರನೇ ವರ್ಷದ ಕಾನೂನು ಪದವಿ ವಿದ್ಯಾರ್ಥಿ 25 ವರ್ಷದ ಕೆ ಎನ್ ಪ್ರಣವ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ಏಕಸದಸ್ಯ ಪೀಠದ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಒಂದು ವಾರಕ್ಕೆ ಮುಂದೂಡಿತು. ವಿಚಾರಣೆ ವೇಳೆ ಕಾನೂನು ವಿದ್ಯಾರ್ಥಿ ಪ್ರಣವ ಖುದ್ದು ವಾದ ಮಂಡಿಸಿದರು.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) (ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ನಿಯಮಗಳು) 2023ರ ಪ್ರಕಾರ ಪ್ರತಿ ಕಾನೂನು ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಕುಂದುಕೊರತೆ ಪರಿಹಾರ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಿ ಅದಕ್ಕೆ ಒಂಬಡ್ಸಮನ್ ನೇಮಕ ಮಾಡಬೇಕು. ಆದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಹಾಗೂ ಯಾವುದೇ ಕಾನೂನು ಕಾಲೇಜುಗಳಲ್ಲಿ ಈ ಸಮಿತಿಗಳನ್ನು ರಚಿಸಲಾಗಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮುಂದುವರೆದು, ಈ ಬಗ್ಗೆ ಕಾನೂನು ವಿಶ್ವವಿದ್ಯಾಲಯ ಕುಲಪತಿ, ರಿಜಿಸ್ಟ್ರಾರ್ ಹಾಗೂ ಯುಜಿಸಿ ಅಧ್ಯಕ್ಷರಿಗೆ 2025ರ ನವೆಂಬರ್ 8 ಮತ್ತು ಡಿಸೆಂಬರ್ 8ಕ್ಕೆ ಇ-ಮೇಲ್ ಮೂಲಕ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಕ್ರಮ ಜರುಗಿಸಿಲ್ಲ. ಆದ್ದರಿಂದ ನ್ಯಾಯಾಲಯ ಈ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.