ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಸೆಪ್ಟೆಂಬರ್ 18ರಂದು ಇಡೀ ದಿನ ನಟ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಬ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಡಾ. ವಿಷ್ಣುವರ್ಧನ್ ಅವರ ಜನ್ಮದಿನಾಚರಣೆಗೆ ಅನುಮತಿ ನೀಡುವಂತೆ 2025ರ ಜೂನ್ 9ರಂದು ನೀಡಿರುವ ಮನವಿಯನ್ನು ಪರಿಗಣಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ವಿ ಎಸ್ ಎಸ್ ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ (ರಿ) ಹಾಗೂ ವಿ ಎಸ್ ಎಸ್ ವಿಷ್ಣು ಸೇನಾ ಸಂಘಟನೆ (ರಿ) ಅಧ್ಯಕ್ಷ ತಿಮ್ಮರಾಜು ಎಂಬುವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ ಎಂ ಶ್ಯಾಮ್‌ಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ಪೀಠವು ಅಭಿಮಾನ್ ಸ್ಟುಡಿಯೋ ಹಾಗೂ ರಾಜ್ಯ ಸರ್ಕಾರದ ನಡುವಿನ ಮಾಲಿಕತ್ವ ವ್ಯಾಜ್ಯದಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿ 2025ರ ಜನವರಿ 13ರಂದು ನ್ಯಾಯಾಲಯ ಈಗಾಗಲೇ ಆದೇಶ ಹೊರಡಿಸಿದೆ. ಹಾಗಾಗಿ, ಪುನಾ ಬೇರೆ ರೀತಿಯ ಆದೇಶ ನೀಡಲು ಸಾಧ್ಯವಿಲ್ಲ. ಹೀಗಾಗಿ, ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ತಿರಸ್ಕರಿಸಲಾಗಿದೆ ಎಂದಿತು.
ಅರ್ಜಿ ಸಂಬಂಧ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಗರ ಜಿಲ್ಲಾಧಿಕಾರಿ, ಬೆಂಗಳೂರು ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ, ಅಭಿಮಾನ್ ಸ್ಟುಡಿಯೋದ ಬಿ ಎಸ್ ಕಾರ್ತಿಕ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಕೆ ಎಸ್ ಅರುಣ್ ವಾದ ಮಂಡಿಸಿ, 2016ರಿಂದ ಪ್ರತಿ ವರ್ಷ ಜನ್ಮದಿನಾಚರಣೆ ಮತ್ತು ಪುಣ್ಯತಿಥಿ ಆಚರಿಸಿಕೊಂಡ ಬರಲಾಗುತ್ತಿದೆ. ನಗರ ಜಿಲ್ಲಾಧಿಕಾರಿಗಳು ಹಿಂದಿನ ಎಲ್ಲಾ ವರ್ಷಗಳಲ್ಲಿ ಕೆಲವು ಷರತ್ತುಗಳನ್ನು ವಿಧಿಸಿ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ. ಈ ಬಾರಿ ಮಾತ್ರ ಅನುಮತಿ ನೀಡಿಲ್ಲ. ಇದು ವಿಷ್ಣುವರ್ಧನ್ ಅವರ ಕೋಟ್ಯಂತರ ಅಭಿಮಾನಗಳ ಭಾವನಾತ್ಮಕ ವಿಷಯವಾಗಿದೆ. ಆದ್ದರಿಂದ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.