ಅಪ್ರಾಪ್ತೆಯನ್ನು ಮದುವೆಯಾಗಿದ್ದಲ್ಲದೆ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿಕಲಚೇತನರೊಬ್ಬರಿಗೆ ಕರ್ನಾಟಕ ಹೈಕೋರ್ಟ್ ಈಚೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ 23 ವರ್ಷದ ವಿಕಲಚೇತನರೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.
ಅರ್ಜಿದಾರರ ವಿರುದ್ಧ 11 ವರ್ಷದ ಬಾಲಕಿ ಮದುವೆಯಾದ ಆರೋಪದಲ್ಲಿ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಹಾಗೂ ಬಾಲ್ಯ ವಿವಾಹ ತಡೆ ಕಾಯಿದೆ ಅಡಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಆದರೆ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 164ರ ಅಡಿಯಲ್ಲಿ ವಿಚಾರಣಾಧೀನ ನ್ಯಾಯಾಲಯದ ಮುಂದೆ ಸ್ವಯಂ ಹೇಳಿಕೆ ದಾಖಲಿಸಿರುವ ಅಪ್ರಾಪ್ತ ಸಂತ್ರಸ್ತೆಯು ತನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿರುವ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ದಾಖಲಿಸಿದೆ.
ಇಬ್ಬರ ನಡುವೆ ದೈಹಿಕ ಸಂಪರ್ಕವೇ ಏರ್ಪಟ್ಟಿಲ್ಲ ಎಂದು ಅಪ್ರಾಪ್ತೆ ತಿಳಿಸಿದ್ದಾರೆ. ಹೀಗಿರುವಾಗ ಅರ್ಜಿದಾರನ ವಿರುದ್ಧ ಕೇವಲ ಬಾಲ್ಯ ವಿವಾಹ ತಡೆ ಕಾಯಿದೆ ಅಡಿಯ ಕೃತ್ಯ ಹೊರತುಪಡಿಸಿ ಬೇರಾವುದೇ ಅಪರಾಧ ಕೃತ್ಯವೆಸಗಿದ ಆರೋಪ ಸಾಬೀತಾಗಿಲ್ಲ. ಅರ್ಜಿದಾರರು ಅಂಗವೈಕಲ್ಯ ಹೊಂದಿದ್ದು, ಕಳೆದ ಒಂದು ವರ್ಷಕ್ಕೂ ಅಧಿಕ ಸಮಯದಿಂದ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಅಂಶಗಳನ್ನು ಪರಿಗಣಿಸಿದರೆ ಅವರು ಜಾಮೀನು ಪಡೆಯಲು ಅರ್ಹ ಎಂದು ಆದೇಶದಲ್ಲಿ ಹೇಳಲಾಗಿದೆ.