Murugha Mutt and Dr. Shivamurthy Murugha Sharanaru 
ಸುದ್ದಿಗಳು

ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಸಂತ್ರಸ್ತರಿಗೆ ವಿಶೇಷ ನ್ಯಾಯಾಲಯದಿಂದ ನೋಟಿಸ್‌ ಜಾರಿ

ಮೊದಲನೇ ಆರೋಪಿ ಮುರುಘಾ ಶರಣರ ಅರ್ಜಿಯೂ ಸೇರಿದಂತೆ, ನಿರೀಕ್ಷಣಾ ಜಾಮೀನು ಕೋರಿರುವ ಮೂರನೇ ಆರೋಪಿ ಬಸವಾದಿತ್ಯ, ನಾಲ್ಕನೇ ಆರೋಪಿ ಎ ಜೆ ಪರಮಶಿವಯ್ಯ ಮತ್ತು ಐದನೇ ಆರೋಪಿ ಎನ್‌ ಗಂಗಾಧರ ಅವರ ಅರ್ಜಿಗಳು ಸೆ.7ಕ್ಕೆ ವಿಚಾರಣೆಗೆ ನಿಗದಿಯಾಗಿವೆ.

Bar & Bench

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಜಾಮೀನು ಮನವಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಸೋಮವಾರ ನೋಟಿಸ್‌ ಜಾರಿ ಮಾಡಿದೆ.

ಸಿಆರ್‌ಪಿಸಿ ಸೆಕ್ಷನ್‌ 439ರ ಅನ್ವಯ ಆರೋಪಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿರುವ ಅರ್ಜಿಯ ವಿಚಾರಣೆಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ನಡೆಸಿದರು. ಸರ್ಕಾರ, ದೂರುದಾರರು ಮತ್ತು ಸಂತ್ರಸ್ತರಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿರುವ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್‌ 7ಕ್ಕೆ ಮುಂದೂಡಿದೆ.

ಮುರುಘಾ ಶರಣರ ಪೊಲೀಸ್‌ ಕಸ್ಟಡಿಯು ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಸೆಪ್ಟೆಂಬರ್‌ 14ರವರೆಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಹೀಗಾಗಿ, ಶನಿವಾರ ಮುರುಘಾ ಶರಣರ ಪರವಾಗಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯು ವಿಚಾರಣೆಗೆ ಬಂದಿತ್ತು.

ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಎಸ್‌ ಬಸವಾದಿತ್ಯ ಅವರು ಸಿಆರ್‌ಪಿಸಿ ಸೆಕ್ಷನ್‌ 438ರ ಅನ್ವಯ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಯೂ ಇಂದು ವಿಚಾರಣೆಗೆ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ದೂರುದಾರರು ಮತ್ತು ಸಂತ್ರಸ್ತರಿಗೆ ನ್ಯಾಯಾಲಯವು ಅಂತಿಮ ಅವಕಾಶ ನೀಡಿದ್ದು, ವಿಚಾರಣೆಯನ್ನು ಸೆಪ್ಟೆಂಬರ್‌ 7ಕ್ಕೆ ನಿಗದಿಪಡಿಸಿದೆ.

ಆಗಸ್ಟ್‌ 30ರಂದು ಬಸವಾದಿತ್ಯ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರು ಕಾಲಾವಕಾಶ ಕೋರಿರುವುದರಿಂದ ಸೋಮವಾರಕ್ಕೆ (ಸೆ.5) ವಿಚಾರಣೆ ಮುಂದೂಡಿಕೆಯಾಗಿತ್ತು.

ಪ್ರಕರಣದಲ್ಲಿ ನಾಲ್ಕನೇ ಆರೋಪಿ ಎ ಜೆ ಪರಮಶಿವಯ್ಯ ಮತ್ತು ಐದನೇ ಆರೋಪಿ ಎನ್‌ ಗಂಗಾಧರ ಅವರು ಸಿಆರ್‌ಪಿಸಿ ಸೆಕ್ಷನ್‌ 438ರ ಅನ್ವಯ ನಿರೀಕ್ಷಣಾ ಜಾಮೀನು ಕೋರಿದ್ದು, ಈ ಅರ್ಜಿಯೂ ಸೆಪ್ಟೆಂಬರ್‌ 7ಕ್ಕೆ ವಿಚಾರಣೆಗೆ ಬರಲಿದೆ. ವಕೀಲ ಕೆ ಎನ್‌ ವಿಶ್ವನಾಥಯ್ಯ ಅವರು ಆರೋಪಿಗಳನ್ನು ಪ್ರತಿನಿಧಿಸಿದ್ದಾರೆ. ಎರಡನೇ ಆರೋಪಿಯಾಗಿರುವ ಹಾಸ್ಟೆಲ್‌ ವಾರ್ಡನ್‌ ರಶ್ಮಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗೆ ಅರ್ಜಿ ಸಲ್ಲಿಕೆಯಾಗಿಲ್ಲ.