Murugha Sharanaru and Chitradurga court 
ಸುದ್ದಿಗಳು

ಪೋಕ್ಸೊ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನವನ್ನು ಅ.10ರವರೆಗೆ ವಿಸ್ತರಿಸಿದ ಚಿತ್ರದುರ್ಗ ವಿಶೇಷ ನ್ಯಾಯಾಲಯ

ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮುರುಘಾ ಶರಣರು ಸೆಪ್ಟೆಂಬರ್‌ 1ರಂದು ಬಂಧನಕ್ಕೆ ಒಳಗಾಗಿದ್ದರು. ಸೆ. 5ರಿಂದ ಇಲ್ಲಿಯವರೆಗೆ ಮೂರನೇ ಬಾರಿಗೆ ಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

Bar & Bench

ಮಠದ ಹಾಸ್ಟೆಲ್‌ನಲ್ಲಿ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದ ಅಡಿ ಬಂಧಿತರಾಗಿರುವ ಮೊದಲ ಆರೋಪಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಎರಡನೇ ಆರೋಪಿ ಅಕ್ಕಮಹಾದೇವಿ ಹಾಸ್ಟೆಲ್‌ ವಾರ್ಡನ್‌ ಎಸ್‌ ರಶ್ಮಿ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.

ಸೆಪ್ಟೆಂಬರ್‌ 14ರಂದು ವಿಧಿಸಿದ್ದ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ವಿಶೇಷ ನ್ಯಾಯಾಧೀಶರಾದ ಬಿ ಕೆ ಕೋಮಲ ಅವರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು ಅಕ್ಟೋಬರ್‌ 10ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.

ಸೆಪ್ಟೆಂಬರ್‌ 1ರಂದು ಬಂಧನಕ್ಕೊಳಗಾಗಿದ್ದ ಮುರುಘಾ ಶರಣರನ್ನು ಆರಂಭದಲ್ಲಿ ನಾಲ್ಕು ದಿನಗಳ ಕಾಲ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ನೀಡಿತ್ತು. ಆನಂತರ ಸೆಪ್ಟೆಂಬರ್‌ 5ರಿಂದ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಮತ್ತೆ ಸೆಪ್ಟೆಂಬರ್‌ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ಮತ್ತೊಮ್ಮೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

ಕಳೆದ ವಾರ ಇಬ್ಬರೂ ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಮೂರನೇ ಆರೋಪಿಯಾಗಿರುವ ಬಸವಾದಿತ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿ ಅದಕ್ಕೂ ಮುಂಚೆ ವಜಾಗೊಂಡಿತ್ತು. ನಾಲ್ಕನೇ ಆರೋಪಿ ಪರಮಶಿವಯ್ಯ ಮತ್ತು ಐದನೇ ಆರೋಪಿ ವಕೀಲ ಎನ್‌ ಗಂಗಾಧರ ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯವು ಇನ್ನಷ್ಟೇ ನಿರ್ಧರಿಸಬೇಕಿದೆ.

ಆಗಸ್ಟ್‌ 26ರಂದು ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಸೆಕ್ಷನ್‌ಗಳಾದ 17, 5(ಎಲ್‌), 6 ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 376(2)(ಎನ್‌), 376(3), 149ರ ಅಡಿ ಸ್ವಾಮೀಜಿ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಚಿತ್ರದುರ್ಗ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು. ಇದನ್ನು ಜೊತೆಗೆ ಪೋಕ್ಸೊ ಕಾಯಿದೆ ಸೆಕ್ಷನ್‌ಗಳಾದ 17, 5(ಎಲ್‌), 6, ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(3), 149 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿರ್ಮೂಲನೆ) ಕಾಯಿದೆ ಸೆಕ್ಷನ್‌ಗಳಾದ 3(1) (ಡಬ್ಲ್ಯು) (1)(2), 3(2) (V) ಅಡಿ ಹೆಚ್ಚುವರಿಯಾಗಿ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು.