Shivamurthy Murugha Sharanaru and Karnataka HC 
ಸುದ್ದಿಗಳು

ಪೋಕ್ಸೊ ಪ್ರಕರಣ: ಮುರುಘಾ ಶರಣರ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಚಿತ್ರದುರ್ಗ ಪೊಲೀಸರಿಗೆ ಹೈಕೋರ್ಟ್‌ ಆದೇಶ

ಚಿತ್ರದುರ್ಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ನಿಗದಿ ಪ್ರಶ್ನಿಸಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌.

Bar & Bench

ಅಪ್ರಾಪ್ತ ಬಾಲಕಿಯರ ಮೇಲೆ ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ನೀಡಿರುವ ದೂರಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸರು ಶರಣರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.

ಚಿತ್ರದುರ್ಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ನಿಗದಿ ಪ್ರಶ್ನಿಸಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕಾಲತ್ತು ಹಾಕಿರುವ ವಕೀಲ ಕೆ ಬಿ ಕೆ ಸ್ವಾಮಿ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್ ಅವರು “ಈ ಮೊದಲಿನ ಪೋಕ್ಸೊ ಕಾಯಿದೆ ಆರೋಪಗಳ ದೂರಿನಲ್ಲೂ ಇದೇ ರೀತಿಯ ಅಪರಾಧಿಕ ಸೆಕ್ಷನ್‌ಗಳ ಪ್ರಕರಣ ದಾಖಲಿಸಲಾಗಿತ್ತು. ತದನಂತರ ಮಠದ ಅಡುಗೆ ಕೆಲಸದ ಮಹಿಳೆ ನೀಡಿದ ಹೇಳಿಕೆ ಆಧರಿಸಿ ಇಂತಹುದೇ ಮತ್ತೊಂದು ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಈಗ ಮತ್ತೆ ಅವೇ ಸಾಕ್ಷಿ ಮತ್ತು ದೂರಿನ ಅಂಶಗಳ ಮೇಲೆ ಅರ್ಜಿದಾರರನ್ನು ಬಂಧಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫಿರ್ಯಾದುದಾರರು ಮನವಿ ಮಾಡಿದ್ದಾರೆ. ಈ ಮೊದಲಿನ ಪ್ರಕರಣದಲ್ಲಿ ಈಗಾಗಲೇ 13 ಸಾಕ್ಷಿಗಳ ವಿಚಾರಣೆ ಮುಗಿದಿರುವ ಕಾರಣ ಅರ್ಜಿದಾರರು ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿದ್ದಾರೆ. ವಾಸ್ತವದಲ್ಲಿ ಈ ಪ್ರಕರಣದಲ್ಲಿ ಕೆಟ್ಟ ರಾಜಕೀಯ ಅಡಕವಾಗಿದ್ದು ಎಫ್‌ಐಆರ್‌ಗೆ ತಡೆ ನೀಡಬೇಕು” ಎಂದು ಕೋರಿದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಕೆಗೆ ಸಮಯಾವಕಾಶ ಬೇಕು” ಎಂದು ಕೋರಿದರು.

ಇದನ್ನು ಪುರಸ್ಕರಿಸಿದ ಪೀಠವು ಅರ್ಜಿಯನ್ನು ಆಲಿಸಿ, ಇತ್ಯರ್ಥಪಡಿಸುವವರೆಗೆ ಬಲವಂತದ ಕ್ರಮ ಬೇಡ ಎಂದು ಪ್ರಾಸಿಕ್ಯೂಷನ್‌ಗೆ ಆದೇಶಿಸಿ ವಿಚಾರಣೆಯನ್ನು ಅಕ್ಟೋಬರ್‌ 16ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲದೆ ಇತರೆ ಮಕ್ಕಳ ಮೇಲೂ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಠದಲ್ಲಿನ ಅಡುಗೆ ಕೆಲಸದ ಮಹಿಳೆ ದೂರಿನಲ್ಲಿ ವಿವರಿಸಿದ್ದರು. ಇದರ ಆಧಾರದಡಿ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ 2022ರ ಅಕ್ಟೋಬರ್ 13ರಂದು ಎಫ್‌ಐಆರ್ ದಾಖಲಿಸಲಾಗಿತ್ತು. ತದನಂತರ ಈ ದೂರನ್ನು ಚಿತ್ರದುರ್ಗ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು.

ಎಫ್‌ಐಆರ್‌ನಲ್ಲಿ ಆರೋಪಿ ಶರಣರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 376 (ಸಿ), 376 (2) (ಎನ್‌), 376 (ಎಬಿ), 376 (3), 366, 366 (ಎ), 323, 114 ಮತ್ತು 34, ಪೋಕ್ಸೊ ಕಾಯಿದೆ ಸೆಕ್ಷನ್ 5 (ಎಲ್‌), 6,7 ಮತ್ತು 17, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಸೆಕ್ಷನ್‌ 3 (ಎಫ್‌) ಮತ್ತು 7 ಹಾಗೂ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ಸಂರಕ್ಷಣೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಇಬ್ಬರು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇವುಗಳನ್ನು ಶರಣರು ಪ್ರಶ್ನಿಸಿದ್ದಾರೆ.