BBMP and Karnataka HC 
ಸುದ್ದಿಗಳು

[ರಸ್ತೆ ಗುಂಡಿ ಪ್ರಕರಣ] ಅನುಪಾಲನಾ ವರದಿ ಸಲ್ಲಿಸಲು ಬಿಬಿಎಂಪಿಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೊಂಡು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜುಲೈ 30ರಂದು ಪಾಲಿಕೆಗೆ ನ್ಯಾಯಾಲಯ ನಿರ್ದೇಶಿಸಿತ್ತು. ಅದರಂತೆ ಆ ಆದೇಶದ ಅನುಪಾಲನಾ ವರದಿ ಸಿದ್ಧವಿದೆ ಎಂದು ತಿಳಿಸಿದ ಬಿಬಿಎಂಪಿ ವಕೀಲರು.

Bar & Bench

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿ ಸಲ್ಲಿಸಲು ಆಗಸ್ಟ್‌ 3ರವರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಬುಧವಾರ ಕಾಲಾವಕಾಶ ನೀಡಿದೆ.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಬಿಬಿಎಂಪಿ ಪ್ರತಿನಿಧಿಸಿದ್ದ ವಕೀಲ ವಿ ಶ್ರೀನಿಧಿ ಅವರು “ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೊಂಡು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜುಲೈ 30ರಂದು ಪಾಲಿಕೆಗೆ ನ್ಯಾಯಾಲಯ ನಿರ್ದೇಶಿಸಿತ್ತು. ಅದರಂತೆ ಆ ಆದೇಶದ ಅನುಪಾಲನಾ ವರದಿ ಸಿದ್ಧವಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು” ಎಂದು ಕೋರಿದರು.

ಅರ್ಜಿದಾರ ಪರ ಹಿರಿಯ ವಕೀಲೆ ಎಸ್‌ ಆರ್‌ ಅನುರಾಧಾ ಅವರು “ಬಿಬಿಎಂಪಿ ಸಲ್ಲಿಸುವ ಅನುಪಾಲನಾ ವರದಿಗೆ ಆಕ್ಷೇಪಣೆ ಸಲ್ಲಿಸಲು ತಮಗೆ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.

ಅದನ್ನು ಪರಿಗಣಿಸಿದ ಪೀಠವು ಬಿಬಿಎಂಪಿಯು ಆಗಸ್ಟ್‌ 3ರೊಳಗೆ ಅನುಪಾಲನಾ ವರದಿ ಸಲ್ಲಿಸಬೇಕು. ಆ ವರದಿಗೆ ಆಕ್ಷೇಪಣೆ ಇದ್ದಲ್ಲಿ ಅರ್ಜಿದಾರರು ಆನಂತರ ಒಂದು ವಾರದಲ್ಲಿ ಅದನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಆಗಸ್ಟ್‌ 11ಕ್ಕೆ ಮುಂದೂಡಿತು.

ಕಳೆದ ವಿಚಾರಣೆಯಲ್ಲಿ ಪೀಠವು “ರಸ್ತೆ ಗುಂಡಿ ವಿಚಾರದಿಂದ ಬೆಂಗಳೂರಿಗೆ ಅತಿ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ನೀವುಗಳು (ಅಧಿಕಾರಿಗಳು) ಅರ್ಥ ಮಾಡಿಕೊಳ್ಳಬೇಕು. ಪ್ರಧಾನ ಮಂತ್ರಿ ಬಂದು ಹೋದ ಬಳಿಕ ರಸ್ತೆ ಹಾಳಾಗಿದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ” ಎಂದು ಬಿಬಿಎಂಪಿ ಅಧಿಕಾರಿಗಳ ಕಾರ್ಯವೈಖರಿಗೆ ಕನ್ನಡಿ ಹಿಡಿದಿತ್ತು.