Karnataka HC and Prajwal Revanna 
ಸುದ್ದಿಗಳು

ಪ್ರಜ್ವಲ್‌ ಪ್ರಕರಣ: ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್‌

Bar & Bench

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಇತ್ಯರ್ಥಪಡಿಸಿದೆ.

ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಉಪಾಧ್ಯಕ್ಷ ಎಸ್ ಎಚ್ ಲಿಂಗೇಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್‌ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್‌ ಅವರು ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲು ಕೋರಿ ಅರ್ಜಿದಾರರು ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದರು. ಆದರೆ, ಇದೇ ಆರೋಪ ಸಂಬಂಧ ಮತ್ತೊಂದು ದೂರು ದಾಖಲಿಲಾಗಿದೆ. ಆದ್ದರಿಂದ, ಅರ್ಜಿದಾರರು ದೂರು ಕುರಿತು ಎಫ್‌ಐಆರ್‌ ದಾಖಲಿಸಲಾಗದು ಎಂದು ತಿಳಿಸಿ ಹಿಂಬರಹ ನೀಡಿದ್ದಾರೆ. ಮತ್ತೊಂದಡೆ ಎಸ್‌ಐಟಿ ಸಮರ್ಪಕವಾಗಿ ತನಿಖೆ ನಡೆಸುವಲ್ಲಿ ಎಡುವುತ್ತಿದೆ. ಆದ್ದರಿಂದ, ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.

ಆಗ ಪೀಠವು “ಈಗಾಗಲೇ ಪ್ರಕರಣ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸುವ ಯಾವುದೇ ಅವಶ್ಯಕತೆ ಇಲ್ಲ. ಅರ್ಜಿದಾರರಿಗೆ ಅಹವಾಲುಗಳಿದ್ದರೆ ಎಸ್‌ಐಟಿಗೆ ದಾಖಲೆ ಸಲ್ಲಿಸಿ ಪರಿಹಾರ ಪಡೆಯಬಹುದು ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.