Darshan Twitter
ಸುದ್ದಿಗಳು

ಜೈಲಿನಲ್ಲಿ ವಿಶೇಷ ಆತಿಥ್ಯ: ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ; ಒಂಬತ್ತು ಸಹಚರರು ಬೇರೆಡೆಗೆ

Bar & Bench

ಜೈಲಿನಲ್ಲಿ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲು ಹಾಗೂ ಇತರೆ ಒಂಬತ್ತು ಆರೋಪಿಗಳನ್ನು ರಾಜ್ಯದ ವಿವಿಧ ಜಿಲ್ಲಾ ಕಾರಾಗೃಹಗಳಿಗೆ ಸ್ಥಳಾಂತರಿಸಲು ಮಂಗಳವಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮುಖ್ಯ ಮೇಲ್ವಿಚಾರಕರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಎಸ್‌ ನಿರ್ಮಲಾ ಅವರು ಈ ಆದೇಶ ನೀಡಿದ್ದಾರೆ.

ಮೈಸೂರಿನ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳಾದ ಪವನ್, ರಾಘವೇಂದ್ರ ನಂದೀಶ್, ಶಿವಮೊಗ್ಗಕ್ಕೆ ಜಗದೀಶ್ ಮತ್ತು ಲಕ್ಷ್ಮಣ, ಧಾರವಾಡಕ್ಕೆ ಧನರಾಜ್, ವಿಜಯಪುರಕ್ಕೆ ವಿನಯ್, ಕಲಬುರ್ಗಿಗೆ ನಾಗರಾಜ್‌, ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರದೂಶ್ ಸ್ಥಳಾಂತರಿಸಲು ನ್ಯಾಯಾಲಯ ಆದೇಶಿಸಿದೆ.

ಮೊದಲನೇ ಆರೋಪಿ ಪವಿತ್ರಾಗೌಡ, ಅನುಕುಮಾರ್‌ ಮತ್ತು ದೀಪಕ್‌ ಪರಪ್ಪನ ಅಗ್ರಹಾರದಲ್ಲೇ ಉಳಿಯಲಿದ್ದಾರೆ. ಈಗಾಗಲೇ ರವಿ, ಕಾರ್ತಿಕ್, ನಿಖಿಲ್ ಮತ್ತು ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದಾರೆ.

ದರ್ಶನ್‌ ಇತರೆ ಕೆಲವು ರೌಡಿ ಶೀಟರ್‌ ಆರೋಪಿಗಳೊಂದಿಗೆ ಜೈಲಿನ ಆವರಣದೊಳಗೆ ಆರಾಮವಾಗಿ ಕುರ್ಚಿಯ ಮೇಲೆ ಕುಳಿತು ಸಿಗರೇಟು ಸೇದುತ್ತಾ, ಕಾಪಿ ಹೀರುತ್ತಿರುವ ಚಿತ್ರ ಮತ್ತು ರೌಡಿ ಶೀಟರ್‌ ಪುತ್ರನೊಂದಿಗೆ ವಿಡಿಯೊ ಕಾಲ್‌ನಲ್ಲಿ ಮಾತನಾಡುತ್ತಿರು ದೃಶ್ಯ ಹಾಗೂ ಬ್ಯಾರಕ್‌ನಲ್ಲಿ ಹಾಸಿಗೆಯ ಮೇಲೆ ಕುಳಿತು ಮೊಬೈಲ್‌ ನೋಡುತ್ತಿರುವ ಚಿತ್ರಗಳು ವೈರಲ್‌ ಆಗಿದ್ದವು.

ಇದರ ಬೆನ್ನಿಗೇ, ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ್‌ ಸೂಚನೆಯಂತೆ ಒಂಬತ್ತು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣವನ್ನು ಹಿರಿಯ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಪರಮೇಶ್ವರ್‌ ಹೇಳಿದ್ದರು.

ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದರ್ಶನ್‌ ಸೇರಿ ಇತರೆ ಆರೋಪಿಗಳನ್ನು ಬೇರೆ ಜಿಲ್ಲಾ ಕಾರಾಗೃಹಗಳಿಗೆ ಸ್ಥಳಾಂತರಿಸಲು ಸೂಚಿಸುವುದಾಗಿ ಹೇಳಿದ್ದರು.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.