BBMP Chief Commissioner Tushar Giri Nath and Karnataka HC
BBMP Chief Commissioner Tushar Giri Nath and Karnataka HC 
ಸುದ್ದಿಗಳು

[ಅಕ್ರಮ ಕಟ್ಟಡ ನಿರ್ಮಾಣ] ಬಿಬಿಎಂಪಿ ಕಾಯಿದೆಯಲ್ಲಿ ಶಿಕ್ಷೆ ಉಲ್ಲೇಖಿಸಲು ಕೋರಿಕೆ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Bar & Bench

ಬೆಂಗಳೂರು ನಗರದಲ್ಲಿ ಅಕ್ರಮ ಅಥವಾ ಕಾನೂನುಬಾಹಿರ ಕಟ್ಟಡ ನಿರ್ಮಾಣ ಮಾಡುವವರ ವಿರುದ್ದ ಕ್ರಮ ಜರುಗಿಸದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಬಿಬಿಎಂಪಿ ಕಾಯಿದೆ 2020ರಲ್ಲಿ ಶಿಕ್ಷೆ ಪ್ರಮಾಣ ಉಲ್ಲೇಖಿಸಿಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನ ವಕೀಲ ಎಸ್‌ ಉಮಾಪತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಬಿಬಿಎಂಪಿ ಕಾಯಿದೆ ಸೆಕ್ಷನ್‌ 252ರ ಅಡಿ ಅಕ್ರಮ ಚಟುವಟಿಕೆ ತಡೆಯಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಆದರೆ, ಸೆಕ್ಷನ್‌ 252ರ ಅಡಿ ಶಿಕ್ಷೆ ಪ್ರಮಾಣ ಉಲ್ಲೇಖಿಸಲು ಸರ್ಕಾರವು ತಾತ್ಸಾರ ತೋರುತ್ತಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಯಾವುದೇ ನಿಬಂಧನೆಗೆ ಒಳಪಟ್ಟಿಲ್ಲ. ಶಿಕ್ಷೆ ಪ್ರಮಾಣ ಉಲ್ಲೇಖಿಸಿದರೆ ನಗರದಾದ್ಯಂತ ಅಕ್ರಮ ಕಟ್ಟಡ ನಿರ್ಮಾಣ ತಡೆಯಬಹುದಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಕಟ್ಟಡ ಬೈಲಾಗಳನ್ನು ಉಲ್ಲಂಘಿಸಲಾಗುತ್ತಿದೆ. ಚರಂಡಿ, ಕೆರೆಗಳು, ಫುಟ್‌ಪಾತ್‌ ಇತ್ಯಾದಿ ಜಾಗಗಳನ್ನು ಅತಿಕ್ರಮಿಸಲಾಗುತ್ತಿದೆ. ಇದರ ವಿರುದ್ಧ ಕ್ರಮಕೈಗೊಳ್ಳುವುದು ತುರ್ತಾಗಿ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ನೆಲಸಮಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಹೈಕೋರ್ಟ್‌ ಮುಂದಿದೆ.

ನಕ್ಷೆ ಮಂಜೂರಾತಿ ಉಲ್ಲಂಘನೆ ಮತ್ತು ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಯುವ ಹೊಣೆಯನ್ನು ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳ ಅಧಿಕಾರಿಗಳಿಗೆ ವಹಿಸಲಾಗಿದೆ. ಈ ಜವಾಬ್ದಾರಿ ನಿರ್ವಹಣೆಯಲ್ಲಿ ವಿಫಲರಾಗುವವರ ವಿರುದ್ಧ ಶಿಸ್ತು ಕ್ರಮ ಜುರುಗಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಈಚೆಗೆ ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.