ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಹಾಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ವಿಧಿಸಿದೆ.
ವಿಶೇಷ ನ್ಯಾಯಾಲಯದಲ್ಲಿನ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು “ಇದೇ ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್‌ನ ಮತ್ತೊಂದು ಪೀಠವು ಅವರ ಅರ್ಜಿ ವಜಾ ಮಾಡಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ತಡೆ ವಿಧಿಸಿದೆ” ಎಂದರು.
ಇದನ್ನು ಆಲಿಸಿದ ಪೀಠವು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಎಲ್ಲಾ ಪ್ರಕ್ರಿಯೆಗಳಿಗೆ ಮುಂದಿನ ವಿಚಾರಣೆವರೆಗೆ ತಡೆ ವಿಧಿಸಲಾಗಿದೆ ಎಂದು ಮಧ್ಯಂತರ ಆದೇಶ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ ಬಿ ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶ ಮಾಡಿತ್ತು. ಅಲ್ಲದೇ, ಎಲ್ಲಾ ಅರ್ಜಿದಾರರು ತಲಾ 10 ಸಾವಿರ ರೂಪಾಯಿಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಸಲ್ಲಿಸಬೇಕು. ಪೊಲೀಸ್ ಅಧಿಕಾರಿಯನ್ನು ಯಾವುದೇ ಸಮರ್ಥನೆ ನೀಡದೆ ಪ್ರತಿವಾದಿಯಾಗಿಸಿರುವುದಕ್ಕೆ ದಂಡ ವಿಧಿಸಲಾಗಿದ್ದು, ಆಕೆಯನ್ನು ವ್ಯಕ್ತಿಗತವಾಗಿ ಪ್ರತಿವಾದಿಯನ್ನಾಗಿಸಲಾಗಿದೆ. ರಾಜಕೀಯ ಪ್ರೇರಿತ ಎಂದು ಅರ್ಜಿಯಲ್ಲಿ ಹೇಳಿರುವುದನ್ನು ಬಿಟ್ಟರೆ ಪೊಲೀಸ್ ಅಧಿಕಾರಿಯನ್ನು ಏಕೆ ಪ್ರತಿವಾದಿಯನ್ನಾಗಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಹೇಳಿತ್ತು. ಹೈಕೋರ್ಟ್‌ನ ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ವಿಧಿಸಿದೆ.
ಪ್ರಕರಣದ ಹಿನ್ನೆಲೆ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ ಎಸ್‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಅರ್ಜಿದಾರರು ಸೇರಿ 36 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರವಾಗಿ ಸಮಾವೇಶಗೊಳ್ಳುವುದು), ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 103 ಅಡಿ ಪ್ರಕರಣ ದಾಖಲಿಸಿದ್ದಾರೆ.