PSI Exam 
ಸುದ್ದಿಗಳು

ಪಿಎಸ್‌ಐ ನೇಮಕ ಮರುಪರೀಕ್ಷೆ: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು; ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ಜವಾಬ್ದಾರಿ

ಕೋಲಾರದ ಚಂದನ್‌ ಎನ್‌ ವಿ ಸೇರಿದಂತೆ ನೂರಾರು ಅಭ್ಯರ್ಥಿಗಳು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ವಜಾ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Bar & Bench

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಅಲ್ಲದೇ, ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಆದೇಶಿಸಿದೆ.

ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್‌ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಪ್ರಕಟಿಸಿತು.

ಕೋಲಾರದ ಚಂದನ್‌ ಎನ್‌ ವಿ ಸೇರಿದಂತೆ ನೂರಾರು ಅಭ್ಯರ್ಥಿಗಳು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ವಜಾ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ 2022ರ ಸೆಪ್ಟೆಂಬರ್‌ 28ರಂದು ಹೈಕೋರ್ಟ್‌ ತಡೆ ವಿಧಿಸಿತ್ತು.

ರಾಜ್ಯ ಸರ್ಕಾರವು 2022ರ ಏಪ್ರಿಲ್‌ 29ರಂದು ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) 2022ರ ಜುಲೈ 19ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಾದಿತ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.  

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಿ ಎಸ್‌ ರಾಜಗೋಪಾಲ, ಡಿ ಆರ್‌ ರವಿಶಂಕರ್‌, ಕೆ ಎನ್‌ ಫಣೀಂದ್ರ, ವಕೀಲ ಸಂತೋಷ್‌ ಕುಮಾರ್‌ ನಗರ್ಲೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದ್ದರು.