Karnataka HC (Kalburgi Bench) and Divya Hagaragi 
ಸುದ್ದಿಗಳು

ಪಿಎಸ್‌ಐ ಹಗರಣ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಪೊಲೀಸ್‌ ಅಧಿಕಾರಿ ವೈಜನಾಥ್‌ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್‌

ದಿವ್ಯಾ ಮತ್ತು ವೈಜನಾಥ್‌ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರ ನೇತೃತ್ವದ ಏಕಸದಸ್ಯ ಪೀಠವು ಸೋಮವಾರ ವಜಾ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಬರಬೇಕಿದೆ.

Bar & Bench

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿಯ ನಾಯಕಿ ಹಾಗೂ ಕಲಬುರ್ಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ (ಕೆಎಸ್‌ಆರ್‌ಪಿ) ಸಹಾಯಕ ಕಮಾಡೆಂಟ್‌ (ಡಿವೈಎಸ್ಪಿ) ವೈಜನಾಥ್‌ ಕಲ್ಯಾಣಿ ರೇವೂರ ಅವರ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು ಈಚೆಗೆ ವಜಾ ಮಾಡಿದೆ.

ದಿವ್ಯಾ ಮತ್ತು ವೈಜನಾಥ್‌ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರ ನೇತೃತ್ವದ ಏಕಸದಸ್ಯ ಪೀಠವು ಸೋಮವಾರ ವಜಾ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

ವೈಜನಾಥ್‌ ಅವರು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ನೆರವಾದ ಆರೋಪ ಎದುರಿಸುತ್ತಿದ್ದಾರೆ. ಏಪ್ರಿಲ್‌ 29ರಂದು ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದರು. ಮೇ 6ರಂದು ವೈಜನಾಥ್‌ ಅವರನ್ನು ಬಂಧಿಸಲಾಗಿತ್ತು. ದಿವ್ಯಾ ಹಾಗರಗಿ ಅವರು ಪ್ರಕರಣದಲ್ಲಿ 18ನೇ ಆರೋಪಿಯಾಗಿದ್ದಾರೆ.

ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವೀರೇಶ ನಿಡಗುಂದಾ ಎಂಬ ಅಭ್ಯರ್ಥಿ ಬಂಧನದೊಂದಿಗೆ ಅಕ್ರಮ ಬಯಲಿಗೆ ಬಂದಿತ್ತು. ಆರೋಪಿಗಳ ವಿರುದ್ಧ ಕಲಬುರ್ಗಿಯ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 120 (ಬಿ), 465, 468, 471, 410 ಜೊತೆಗೆ 34ರ ಅಡಿ ಪ್ರಕರಣ ದಾಖಲಾಗಿದೆ.

ಅರ್ಜಿದಾರರ ಪರವಾಗಿ ವಕೀಲ ಅವಿನಾಶ್‌ ಉಪ್ಲಾವೋಂಕರ್‌ ವಾದಿಸಿದ್ದರು. ರಾಜ್ಯ ಸರ್ಕಾರವನ್ನು ವಿಶೇಷ ಸರ್ಕಾರಿ ಅಭಿಯೋಜಕ ಕಿರಣ್‌ ಜವಳಿ ಪ್ರತಿನಿಧಿಸಿದ್ದರು.