ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಶಿಕ್ಷೆಯ ಪ್ರಮಾಣ ಶೇ. 3.44 ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಹೆಚ್ಚಿಸಬೇಕು. ನಮ್ಮ ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಮುಂದಿನ ಸಭೆಯಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ, ನಾಗರಿಕ ಹಕ್ಕು ರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯಿದೆಯನ್ನು ಗಂಭೀರವಾಗಿ ಪರಿಗಣಿಸಿದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಪ್ರಾಸಿಕ್ಯೂಷನ್ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯ ಎಂದರು.
ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುವ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.
ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿಜಿಪಿಗೆ ವರದಿ ಕಳುಹಿಸಬೇಕು ಎಂದು ಸೂಚಿಸಿದರು.