Dr. Yathindra Siddaramaiah & Karnataka HC 
ಸುದ್ದಿಗಳು

ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ಮೇಕೆದಾಟು ಹೋರಾಟ: ಡಾ. ಯತೀಂದ್ರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿದ ಹೈಕೋರ್ಟ್

ಸಾಂಕ್ರಾಮಿಕ ರೋಗಗಳ ಕಾಯಿದೆ-2020ರ ಸೆಕ್ಷನ್ 5(3ಎ), ಐಪಿಸಿ ಸೆಕ್ಷನ್‌ಗಳಾ 141, 143, 290, 336, 149 ಅಡಿಯಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಯತೀಂದ್ರ ಸೇರಿ ಕಾಂಗ್ರೆಸ್‌ನ 30 ನಾಯಕರ ವಿರುದ್ಧ 2022ರ ಜ.9ರಂದು ಎಫ್ಐಆರ್ ದಾಖಲಾಗಿತ್ತು.

Bar & Bench

ಎರಡು ವರ್ಷಗಳ ಹಿಂದೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ವತಿಯಿಂದ ಕನಕಪುರದಲ್ಲಿ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗಿಯಾಗುವ ಮೂಲಕ ಕೋವಿಡ್‌-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ.

ಡಾ. ಯತೀಂದ್ರ ತಮ್ಮ ವಿರುದ್ಧದ ಎಫ್‌ಐಆರ್‌ ಹಾಗೂ ಕನಕಪುರದ 1ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಇದೇ ಪ್ರಕರಣ ಸಂಬಂಧ ಕಾಂಗ್ರೆಸ್‌ನ ಇತರೆ ಮುಖಂಡರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಿ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು. ಅದನ್ನು ಪರಿಗಣಿಸಿದ ಪೀಠವು ಯತೀಂದ್ರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ಮೇಕೆದಾಟು ಜಲಾಶಯ ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ 2022ರ ಜನವರಿ 9ರಿಂದ 10 ದಿನ ರಾಮನಗರ ಜಿಲ್ಲೆಯ ಮೇಕದಾಟು ಪ್ರದೇಶದಿಂದ ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜುವರೆಗೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ-2020ರ ಸೆಕ್ಷನ್‌ 5(3ಎ), ಐಪಿಸಿ ಸೆಕ್ಷನ್‌ಗಳಾದ 141, 143, 290, 336, 149 ಅಡಿಯಲ್ಲಿ ಸಾತನೂರು ಪೊಲೀಸ್‌ ಠಾಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಪಕ್ಷದ 30 ನಾಯಕರ ವಿರುದ್ಧ 2022ರ ಜನವರಿ 9ರಂದು ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣವು ಕನಕಪುರ ಒಂದನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿತ್ತು. ಪ್ರಕರಣದಲ್ಲಿ ಯತೀಂದ್ರ ಅವರು 20ನೇ ಆರೋಪಿಯಾಗಿದ್ದರು.