Ramesh Jarkiholi Facebook
ಸುದ್ದಿಗಳು

ಜಾರಕಿಹೊಳಿ ಬ್ಲ್ಯಾಕ್‌ ಮೇಲ್‌ ಪ್ರಕರಣ: ನರೇಶ್‌, ಶ್ರವಣ್‌ ನಿರೀಕ್ಷಣಾ ಜಾಮೀನು ಅರ್ಜಿ ಬುಧವಾರಕ್ಕೆ ಮುಂದೂಡಿಕೆ

ಆಕ್ಷೇಪಣೆ ಸಲ್ಲಿಸಲು ವಿಫಲವಾದ ಪ್ರಾಸಿಕ್ಯೂಷನ್‌ ಪರ ವಕೀಲ ಕಿರಣ್‌ ಜವಳಿ ಅವರನ್ನು ನ್ಯಾಯಮೂರ್ತಿ ಲಕ್ಷ್ಮಿನಾರಾಯಣ್‌ ಭಟ್‌ ಅವರಿದ್ದ ಪೀಠವು ತರಾಟೆಗೆ ತೆಗೆದುಕೊಂಡಿತು.

Bar & Bench

ಮಾಜಿ ಸಚಿವ ರಮೇಶ ಜಾರಕಿಹೊಳಿ ಆಪ್ತರೊಬ್ಬರು ಹೂಡಿರುವ ಬ್ಲ್ಯಾಕ್‌ಮೇಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್‌ ಗೌಡ ಮತ್ತು ಶ್ರವಣ್‌ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಆಕ್ಷೇಪಣೆ ಸಲ್ಲಿಸಲು ವಿಫಲವಾದ ಪ್ರಾಸಿಕ್ಯೂಷನ್‌ ಪರ ವಕೀಲ ಕಿರಣ್‌ ಜವಳಿ ಅವರನ್ನು ನ್ಯಾಯಮೂರ್ತಿ ಲಕ್ಷ್ಮಿನಾರಾಯಣ್‌ ಭಟ್‌ ಅವರಿದ್ದ ಪೀಠವು ತರಾಟೆಗೆ ತೆಗೆದುಕೊಂಡಿತು. ಕೋವಿಡ್‌ ಹಿನ್ನೆಲೆಯಲ್ಲಿ ಶನಿವಾರ ನ್ಯಾಯಾಲಯಕ್ಕೆ ರಜೆ ನೀಡಲಾಗಿದ್ದು, ಇಂದು ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಅವಕಾಶ ಕಲ್ಪಿಸಲಾಗಿತ್ತು.

“ಸೆಕ್ಸ್‌ ಸಿ ಡಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಮನವಿಯು ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿ ಇದ್ದು, ಅದು ಪೂರ್ಣಗೊಂಡ ಬಳಿಕ ಸದರಿ ಪ್ರಕರಣದ ವಿಚಾರಣೆ ನಡೆಸಬೇಕು” ಎಂದು ಪ್ರಾಸಿಕ್ಯೂಷನ್‌ ಪರ ವಕೀಲ ಕಿರಣ್‌ ಜವಳಿ ನ್ಯಾಯಾಲಯವನ್ನು ಕೋರಿದರು. ಇದಕ್ಕೆ ತಗಾದೆ ಎತ್ತಿದ ನರೇಶ್‌ ಮತ್ತು ಶ್ರವಣ್‌ ಪರ ವಕೀಲ ಎ ಎಸ್‌ ಪೊನ್ನಣ್ಣ ಅವರು “ಪಿಐಎಲ್‌ಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ನ್ಯಾಯಾಲಯ ನಿರ್ದೇಶಿಸಿದ್ದು, ವಿಚಾರಣೆಯನ್ನು ಮುಂದೂಡಿತು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಸಿ ಡಿ ಸೃಷ್ಟಿಸಿ, ಬ್ಲ್ಯಾಕ್‌ ಮೇಲ್‌ ಮತ್ತು ವಂಚನೆ ಮಾಡಲಾಗಿದೆ ಎಂದು ಜಾರಕಿಹೊಳಿ ಆಪ್ತ ಎನ್ನಲಾದ ನಾಗರಾಜ್‌ ಎಂಬವರು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಕಳೆದ ಮಾರ್ಚ್‌ನಲ್ಲಿ ದೂರು ದಾಖಲಿಸಿದ್ದರು.