ಸುದ್ದಿಗಳು

ಅತ್ಯಾಚಾರ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ 10ರವರೆಗೆ ವಿಸ್ತರಣೆ

Bar & Bench

ಅತ್ಯಾಚಾರದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಗುರುವಾರ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ.

ಈ ಮೊದಲು ನೀಡಿದ್ದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್‌ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ ಎನ್‌ ಶಿವಕುಮಾರ್ ಪುರಸ್ಕರಿಸಿದರು.

ಆರೋಪಿ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಹಾಜರಿದ್ದರು. ಮೇ 31ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಜ್ವಲ್‌ರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಅಂದು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿ ಜೂನ್‌ 6ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದಿದ್ದರು.

ಪ್ರಜ್ವಲ್‌ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅವುಗಳ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ), 376, 506, 505 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನು, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್‌), 506, 354ಎ(1)(ii), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೇ, ಬೆಂಗಳೂರಿನ ಸಿಐಡಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್)‌, 376(2)(ಕೆ), 506, 354ಎ(1)(ii), 354(ಬಿ), 354(ಸಿ) ಮತ್ತು ಐಟಿ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಜ್ವಲ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.