ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಏಳು ದಿನಗಳು ಅಂದರೆ ಜೂನ್ 6ರವರೆಗೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶುಕ್ರವಾರ ವಿಶೇಷ ತನಿಖಾ ದಳದ ಕಸ್ಟಡಿಗೆ ನೀಡಿದೆ.
ಬಂಧಿತ ಪ್ರಜ್ವಲ್‌ರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಅವರ ಮುಂದೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಮೊದಲಿಗೆ ಪೀಠವು ಪ್ರಜ್ವಲ್‌ರಿಂದ ಬಂಧನ ಮತ್ತಿತರ ಮಾಹಿತಿ ಪಡೆಯಿತು.
ಆನಂತರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು “ಪ್ರಜ್ವಲ್ ಕಾನೂನು ರೂಪಿಸುವ ಸ್ಥಾನದಲ್ಲಿರುವವರು. ನೂರಾರು ಮಹಿಳೆಯರು ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ, ಅವರನ್ನು 15 ದಿನಗಳ ಎಸ್‌ಐಟಿ ಕಸ್ಟಡಿಗೆ ತನಿಖೆಗಾಗಿ ನೀಡಬೇಕು” ಎಂದು ಕೋರಿದರು.
ಇದಕ್ಕೆ ಪ್ರಜ್ವಲ್ ಪರ ವಕೀಲ ಜಿ ಅರುಣ್ ಅವರು “ಮೊದಲಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿತ್ತು. ಆನಂತರ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಲಾಗಿದೆ. ಈ ಮೂಲಕ ಜಾಮೀನುರಹಿತ ಪ್ರಕರಣವನ್ನಾಗಿ ಮಾಡಲಾಗಿದೆ. ಸಿದ್ಧಪಡಿಸಿದ ದೂರನ್ನು ಸಂತ್ರಸ್ತೆಯಿಂದ ಪಡೆಯಲಾಗಿದೆ. ಸಂತ್ರಸ್ತೆಯ ವಿಡಿಯೊ ಹೇಳಿಕೆ ದಾಖಲಿಸಿಲ್ಲ. ಇದೆಲ್ಲದರ ನಡುವೆ ಪ್ರಜ್ವಲ್ ಎಲ್ಲಾ ರೀತಿಯಲ್ಲೂ ತನಿಖೆಗೆ ಸಹಕರಿಸಲು ಸಿದ್ಧರಿದ್ದಾರೆ” ಎಂದು ಆಕ್ಷೇಪಿಸಿದರು.
ವಾದ-ಪ್ರತಿವಾದ ಆಲಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿದೆ.
ಶುಕ್ರವಾರ ಮಧ್ಯರಾತ್ರಿ 1.30ರ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ರನ್ನು ವಶಕ್ಕೆ ಪಡೆದಿದ್ದರು.
ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ), 376, 506, 505 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.
ಇನ್ನು, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್), 506, 354ಎ(1)(ii), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೇ, ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(2)(ಕೆ), 506, 354ಎ(1)(ii), 354(ಬಿ), 354(ಸಿ) ಮತ್ತು ಐಟಿ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.