High Court of Karnataka
High Court of Karnataka  
ಸುದ್ದಿಗಳು

ಲೋಪರಹಿತವಾಗಿ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿಸಿ: ಹೈಕೋರ್ಟ್‌ ತಾಕೀತು

Bar & Bench

ಗುತ್ತಿಗೆದಾರರು ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದಾಗ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ರೀತಿಯ ಸಂಸ್ಥೆಗಳು ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಬ್ಯಾಟರಾಯನಪುರ ಮತ್ತು ಯಲಹಂಕ ವಿಭಾಗದಲ್ಲಿ ಬಿಬಿಎಂಪಿಯ ಗುತ್ತಿಗೆ ಕಾಮಗಾರಿಗಳನ್ನು ನಡೆಸಲಾಗಿದೆ. ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ಸರ್ಟಿಫಿಕೇಟ್‌ ನೀಡಿದೆ. ಆದರೆ, ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದಿದ್ದರೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ನಗರದ ಸತ್ಯ ಕನ್ಸ್‌ಟ್ರಕ್ಷನ್ಸ್ ಕಂಪೆನಿ ಮತ್ತು ಗುತ್ತಿಗೆದಾರರಾದ ಬಿ ಬಿ ಉಮೇಶ್ ಮತ್ತು ರೋಹಿತ್ ಸಲ್ಲಿಸಿದ್ದ ಪ್ರತ್ಯೇಕ ಮನವಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ್ದರೂ ಹಣ ಪಾತಿಸುತ್ತಿಲ್ಲ ಎಂದು ಆಕ್ಷೇಪಿಸಿ ಗುತ್ತಿಗೆದಾರರು ನ್ಯಾಯಾಲಯದ ಮೆಟ್ಟಿಲೇರುತ್ತಿರುವ ಹಲವು ಪ್ರಕರಣಗಳು ನಮ್ಮ ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳಲ್ಲಿ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಂವಿಧಾನದ ಹೊಣೆಗಾರಿಕೆ ನಿರ್ವಹಣೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಬೇಕು. ಗುತ್ತಿಗೆ ಹಣ ಪಾವತಿಸದೆ ಅಪ್ರಾಮಾಣಿಕತೆ ತೋರಬಾರದು. ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿಸಬೇಕು ಎಂದು ಪೀಠ ನಿರ್ದೇಶಿಸಿದೆ.

ಗುತ್ತಿಗೆದಾರರು ಬೃಹತ್ ಪ್ರಮಾಣದಲ್ಲಿ ಹಣ ವ್ಯಯಿಸಿ ಕಾಮಗಾರಿ ಪೂರ್ಣಗೊಳಿಸಿರುತ್ತಾರೆ. ಕೆಲ ಸಂದರ್ಭದಲ್ಲಿ ಸಾಲ ಮಾಡಿಯೂ ಹಣ ವಿನಿಯೋಗ ಮಾಡಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದರೂ ಹಾಗೂ ಅದನ್ನು ದೃಢೀಕರಿಸಿ ಸರ್ಟಿಫಿಕೇಟ್‌ ನೀಡಿದ ನಂತರವೂ ಹಣ ಬಿಡುಗಡೆಗೆ ವಿಳಂಬ ಮಾಡುವುದು ನ್ಯಾಯಸಮ್ಮತವಲ್ಲ. ಹಣಕ್ಕಾಗಿ ಗುತ್ತಿಗೆದಾರರು ನ್ಯಾಯಾಲಯದ ಮೆಟ್ಟಿಲೇರಿ ಕಾನೂನು ಹೋರಾಟ ನಡೆಸುವ ಪರಿಸ್ಥಿತಿ ಸೃಷ್ಟಿಸಬಾರದು ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.

ಬಿಬಿಎಂಪಿಯಿಂದ ಮೆಮೊ ಸಲ್ಲಿಕೆ: ಗುತ್ತಿಗೆ ಹಣ ಪಾವತಿಗೆ ಸಂಬಂಧಿಸಿದಂತೆ ಬಿಬಿಎಂಪಿಯನ್ನು ಪೀಠವು ಕಳೆದ ವಿಚಾರಣೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ಹಿನ್ನೆಲೆಯಲ್ಲಿ ಅರ್ಜಿದಾರರು ಕೈಗೊಂಡಿರುವ ಕಾಮಗಾರಿಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕಿದೆ. ಅದಕ್ಕಾಗಿ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕಿದೆ. ನಾಲ್ಕು ವಾರ ಕಾಲಾವಕಾಶ ನೀಡಿದರೆ, ಸರ್ಕಾರದಿಂದ ಅನುಮೋದನೆ ಪಡೆದು ಅರ್ಜಿದಾರರಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ಮೆಮೊ ಸಲ್ಲಿಸಿತು.

ಇದನ್ನು ಪರಿಗಣಿಸಿದ ಪೀಠವು ನ್ಯಾಯಾಲಯಕ್ಕೆ ನೀಡಿರುವ ಭರವಸೆಯಂತೆ ಅರ್ಜಿದಾರರಿಗೆ ಶೀಘ್ರ ಹಣ ಬಿಡುಗಡೆ ಮಾಡಬೇಕು. ಒಂದೊಮ್ಮೆ ವಿಳಂಬವಾದರೆ ಮಾಡಿದರ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕಿದ್ದ ದಿನದಿಂದ ಪ್ರತಿ ತಿಂಗಳಿಗೆ ಶೇ 2ರಷ್ಟು ಬಡ್ಡಿ ಪಾವತಿಸಬೇಕು. ಆ ಹಣವನ್ನು ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಈ ಆದೇಶ ಪಾಲಿಸಿದ ಬಗ್ಗೆ ಎರಡು ವಾರದಲ್ಲಿ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ನಿರ್ದೇಶಿಸಿದ್ದು, ತಪ್ಪಿದರೆ ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಉಲ್ಲೇಖ: ಗುತ್ತಿಗೆ ಹಣ ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಗೂ ಮೃತರ ಕುಟುಂಬ ಸದಸ್ಯರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಜತೆಗೆ, ಈ ಅರ್ಜಿಯನ್ನು ಶೀಘ್ರ ಇತ್ಯರ್ಥಪಡಿಸಬೇಕು ಎಂದು ಕೋರಿದ್ದರು. ಈ ವಿಚಾರವನ್ನು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ.