Jesus Christ and and Karnataka HC

 
ಸುದ್ದಿಗಳು

[ಕ್ರಿಸ್ಮಸ್‌ ಮತಾಂತರ ವಿವಾದ] ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅರ್ಜಿದಾರರಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್‌

ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಅನ್ನು ಎಸ್ತೆಲಾ ಲೂಯಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.

Bar & Bench

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಣಪತಿಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರ ಮನೆಯಲ್ಲಿ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಬುಧವಾರ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಎಸ್ತೆಲಾ ಲೂಯಿಸ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

“ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು ಎಂದು ಷರತ್ತು ವಿಧಿಸಿದೆ. ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆಸಬಾರದು. ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು ನಿಗಾವಹಿಸಬಹುದು” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ವಿಚಾರಣೆ ವೇಳೆ ಅರ್ಜಿಗೆ ಆಕ್ಷೇಪಿಸಿದ ಸರ್ಕಾರಿ ವಕೀಲ ವಿನೋದ್ ಅವರು “ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ ಅರ್ಜಿದಾರರು ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ನಡೆಸಲು ಅನುಮತಿ ನೀಡಬಾರದು” ಎಂದರು.

ಅರ್ಜಿದಾರ ಪರ ವಕೀಲರು “ಮತಾಂತರ ಚಟುವಟಿಕೆ ನಡೆಸುತ್ತಿಲ್ಲ. ಕ್ರಿಸ್ಮಸ್ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಮತಾಂತರ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ವಾದಿಸಿದರು.